ನವದೆಹಲಿ/ಬೆಂಗಳೂರು: ನನ್ನ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ನಂತರ ಅನೇಕರು ಮಾತನಾಡುತ್ತಿದ್ದಾರೆ. ಯಾರ್ಯಾರ ಮನಸ್ಸು ಮತ್ತು ನಾಲಿಗೆ ಮೇಲೆ ಏನೇನಿದೆ ಎಂಬುದು ಈಗ ತಿಳಿಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಬಿಐ ತನಿಖೆಗೆ ನೀಡಿದ್ದ ಆದೇಶ ಹಿಂಪಡೆದ ಸರ್ಕಾರದ ನಿರ್ಧಾರದ ಬಗ್ಗೆ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ತನಿಖೆಗೆ ಅನುಮತಿ ವಾಪಸ್ ಪಡೆದಿರುವ ಬೆಳವಣಿಗೆಯಿಂದ ಎಲ್ಲರ ಮನಸ್ಥಿತಿಯೂ ಅರ್ಥವಾಗುತ್ತಿದೆ. ಯಾರ್ಯಾರು ಗೆಳೆಯರು, ಅವರ ಭಾವನೆ ಏನಿದೆ ಎಂಬುದು ಈಗ ತಿಳಿಯುತ್ತಿದೆ. ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿರುವ ಬಗ್ಗೆ ಈಗ ಮಾತನಾಡಲು ಹೋಗುವುದಿಲ್ಲ. ಮುಂದೆ ಅದರ ಬಗ್ಗೆ ಖಂಡಿತವಾಗಿಯೂ ಮಾತನಾಡುತ್ತೇನೆ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದರು.
ಸೋಮಣ್ಣ ನನ್ನ ಬಳಿ ಮಾತನಾಡಿಲ್ಲ:ಸೋಮಣ್ಣ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ನಡೆಯುತ್ತಿದೆಯಲ್ಲ ಎಂದು ಕೇಳಿದಾಗ, "ಸೋಮಣ್ಣ ಅವರು ನನ್ನ ಬಳಿ ಈ ವಿಚಾರವಾಗಿ ಏನೂ ಮಾತನಾಡಿಲ್ಲ. ಅವರ ದುಃಖ, ದುಮ್ಮಾನಗಳನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಅವರು ನಮ್ಮ ತಾಲೂಕಿನವರು, ಹಿರಿಯ ನಾಯಕರು. ಅವರು ಎರಡು ಕಡೆ ನಿಂತು ಸೋತರು. ಅವರು ಅಲ್ಲಿ ಏಕೆ ಹೋದರು ಎಂಬುದೇ ನನಗೆ ವಿಸ್ಮಯ ಹಾಗೂ ದೊಡ್ಡ ಪ್ರಶ್ನೆಯಾಗಿದೆ. ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ತಿಳಿಸಿದರು.
ತೆಲಂಗಾಣದಲ್ಲಿ ಕಾಂಗ್ರೆಸ್ ಪರ ಅಲೆ:ಕರ್ನಾಟಕ ಮಾದರಿಯಂತೆ ತೆಲಂಗಾಣದಲ್ಲಿ 6 ಗ್ಯಾರಂಟಿಗಳನ್ನು ನೀಡಲಾಗಿದೆ. ದಲಿತ ಸಿಎಂ ಸೇರಿದಂತೆ ಕೆಸಿಆರ್ ಅವರ ನೇತೃತ್ವದ ಸರ್ಕಾರ 10 ವರ್ಷಗಳಲ್ಲಿ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ತೆಲಂಗಾಣ ರಾಜ್ಯ ರಚನೆಗೆ ಸೋನಿಯಾ ಗಾಂಧಿ ಅವರೇ ಕಾರಣ. ತೆಲಂಗಾಣದ ಜನರಿಗೆ ಸೋನಿಯಾಗಾಂಧಿ ಅವರ ಋಣ ತೀರಿಸಬೇಕು ಎನ್ನುವ ಭಾವನೆ ಬಂದಿದೆ ಎಂದರು.
ಜನರಿಗೆ ತೋಟದ ಮನೆಯಲ್ಲಿ ಕುಳಿತು ಕೆಲಸ ಮಾಡುವವರು ಬೇಕಿಲ್ಲ. ಜನರ ಮಧ್ಯೆ ಕೆಲಸ ಮಾಡುವ ಸರ್ಕಾರ ಬೇಕು ಎನ್ನುವುದು ಅರ್ಥವಾಗಿದೆ. ಜನ ಬದಲಾವಣೆ ಬಯಸಿದ್ದಾರೆ. ತೆಲಂಗಾಣ ಚುನಾವಣೆಗೆ ಕರ್ನಾಟಕದ ಸುಮಾರು 40 ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು. ನಾನು ಸಹ 5 ದಿನಗಳ ಕಾಲ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಅವರೂ ಭಾಗವಹಿಸಿದ್ದರು ಎಂದು ಹೇಳಿದರು.