ಭುವನೇಶ್ವರ (ಒಡಿಶಾ):ಅಸಿಸ್ಟೆಂಟ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ನಡೆಸಿದ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಅಸ್ವಸ್ಥರಾಗಿದ್ದ ಒಡಿಶಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ನಬಾ ಕಿಶೋರ್ ದಾಸ್ ಭಾನುವಾರ ಸಂಜೆ ನಿಧನರಾಗಿದ್ದರು. ಸಚಿವರ ಅಗಲಿಕೆಯ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರವು ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ಈ ಅವಧಿಯಲ್ಲಿ ನಡೆಯಬೇಕಿದ್ದ ಸರ್ಕಾರದ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.
ಹುಟ್ಟೂರಲ್ಲಿ ಅಂತ್ಯಕ್ರಿಯೆ: ಸಚಿವರ ಪಾರ್ಥಿವ ಶರೀರವನ್ನು ಇಂದು ಬೆಳಿಗ್ಗೆ ಬಿಜೆಡಿಯ ಕಚೇರಿಗೆ ರವಾನಿಸಲಾಗುತ್ತದೆ. ಬಳಿಕ ಬಿಜೆಡಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಗೌರವ ನಮನ ಸಲ್ಲಿಸಲಿದ್ದಾರೆ. ನಂತರ ಮೃತದೇಹವನ್ನು ವಿಶೇಷ ವಿಮಾನದಲ್ಲಿ ಸಚಿವರ ಹುಟ್ಟೂರು ಝಾರ್ಸುಗುಡಾಕ್ಕೆ ರವಾನಿಸಿ, ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
ನಿನ್ನೆ ನಡೆದ ಘಟನೆ:ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ನಬಾ ಕಿಶೋರ್ ದಾಸ್ ಭಾನುವಾರ ತೆರಳುತ್ತಿದ್ದರು. ಈ ವೇಳೆ ಝಾರ್ಸುಗುಡಾ ಜಿಲ್ಲೆಯ ಗಾಂಧಿ ಚೌಕ್‌ನಲ್ಲಿ ಸಮವಸ್ತ್ರದಲ್ಲಿದ್ದ ಎಎಸ್‌ಐ ಗೋಪಾಲ್ ದಾಸ್ ಎಂಬುವವರು ಆರೋಗ್ಯ ಸಚಿವರ ವಾಹನದ ಬಳಿ ಬಂದು ಸರ್ವಿಸ್ ರಿವಾಲ್ವಾರ್ನಿಂದ ಏಕಾಏಕಿ ಗುಂಡು ಹಾರಿಸಿದ್ದರು. ಪರಿಣಾಮ ಸಚಿವರು ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏರ್ ಆಂಬ್ಯುಲೆನ್ಸ್ ಮೂಲಕ ಭುವನೇಶ್ವರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಭಾನುವಾರ ಸಂಜೆ ಆಸ್ಪತ್ರೆಯಲ್ಲೇ ನಬಾ ದಾಸ್ ಕೊನೆಯುಸಿರೆಳೆದಿದ್ದರು.