ಬಾಲಸೋರ್ (ಒಡಿಶಾ): ಒಡಿಶಾದಲ್ಲಿ ನಡೆದ ಭೀಕರ ತ್ರಿವಳಿ ರೈಲು ದುರಂತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು. ಬಾಲಸೋರ್ ಜಿಲ್ಲೆಯ ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಲಾಗಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.
ಶುಕ್ರವಾರ ಸಂಭವಿಸಿದ ಮೂರು ರೈಲುಗಳ ಅಪಘಾತದಲ್ಲಿ ಶನಿವಾರ ಮಧ್ಯಾಹ್ನದ ವೇಳೆಗೆ ಮೃತರ ಸಂಖ್ಯೆ 261ಕ್ಕೆ ಏರಿದೆ. ಸುಮಾರು 900 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪುನಃಸ್ಥಾಪನೆ ಕಾರ್ಯ ಪ್ರಾರಂಭಿಸಲಾಗಿದೆ. ನಾವು ಈ ಘಟನೆಯನ್ನು ಕೂಲಂಕಷವಾಗಿ ತನಿಖೆ ಮಾಡುತ್ತೇವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದರು.
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಕೋಲ್ಕತ್ತಾ ಭೇಟಿಯನ್ನು ಮೊಟಕುಗೊಳಿಸಿ ಅಪಘಾತದ ಸ್ಥಳಕ್ಕೆ ತಲುಪಿ ಪರಿಸ್ಥಿತಿ ಅವಲೋಕಿಸಿದರು. ಈ ವೇಳೆ ಮಾತನಾಡಿ, ಇದೊಂದು ದುರದೃಷ್ಟಕರ ಘಟನೆ. ಕೆಲವು ತಾಂತ್ರಿಕ ಕಾರಣಗಳಿಂದ ಈ ದುರಂತ ಸಂಭವಿಸಿದೆ. ರೈಲ್ವೆ ಇಲಾಖೆಯಿಂದ ತನಿಖೆಗೆ ಆದೇಶಿಸಲಾಗಿದೆ. ಪ್ರಧಾನಿ ಮೋದಿ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:ಒಡಿಶಾ ರೈಲು ದುರಂತ: ಆಸ್ಪತ್ರೆಯೆದುರು ಸರತಿ ಸಾಲಿನಲ್ಲಿ ನಿಂತು ಸ್ಥಳೀಯರಿಂದ ರಕ್ತದಾನ