ನವದೆಹಲಿ:ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಒಂದು ವರ್ಷದಿಂದ ರೈತರು ನಡೆಸಿದ ಪ್ರತಿಭಟನೆ ವೇಳೆ ಮೃತಪಟ್ಟಿದ್ದ ರೈತರ ದಾಖಲೆ ಇಲ್ಲ ಎಂದಿದ್ದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಸಭೆಯಲ್ಲಿಂದು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿವೆ.
12 ಗಂಟೆಗೆ ಕಲಾಪ ಪುನಾರಂಭಗೊಂಡಾಗ ಸದನದ ಬಾವಿಗಿಳಿದ ವಿಪಕ್ಷದ ಕೆಲ ಸದಸ್ಯರು ಘೋಷಣೆಗಳನ್ನು ಕೂಗಿ, ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಭಾಪತಿ ಸ್ಥಾನದಲ್ಲಿದ್ದ ಉಪ ಸಭಾಪತಿ ಹರಿವಂಶ್ ನಾರಾಯಣ ಸಿಂಗ್ ತಮ್ಮ ಸ್ಥಾನಗಳಿಗೆ ಹೋಗುವಂತೆ ಸದಸ್ಯರಿಗೆ ಎಷ್ಟೇ ಮನವಿ ಮಾಡಿದರೂ ಪ್ರತಿಭಟನಾ ನಿರತರು ಅಲ್ಲಿಂದ ಕದಲಲಿಲ್ಲ. ಗದ್ದಲದ ನಡುವೆಯೇ ಕೆಲಕಾಲ ಪ್ರಶ್ನೋತ್ತರ ಕಲಾಪ ಮುಂದುವರಿಯಿತು. ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಪದೇ ಪದೆ ಕಲಾಪಕ್ಕೆ ಅಡ್ಡಿ ಪಡಿಸುತ್ತಿದ್ದ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 2 ಗಂಟೆ ಮುಂದೂಡಲಾಯಿತು.