ನವದೆಹಲಿ: ಅಗತ್ಯ ವಸ್ತುಗಳ ಜಿಎಸ್ಟಿ ಏರಿಕೆ ಹಾಗೂ ಹಣದುಬ್ಬರ ವಿರೋಧಿಸಿ ಪ್ರತಿಪಕ್ಷದ ಸಂಸದರು ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಇಂದು ಪ್ರತಿಭಟನೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದು, ಬೆಲೆ ಏರಿಕೆ ಹಿಂಪಡೆದುಕೊಳ್ಳುವಂತೆ ಒತ್ತಾಯಿಸಿದರು. ಕಾಂಗ್ರೆಸ್ ಹಿರಿಯ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಇದರಲ್ಲಿ ಟಿಆರ್ಎಸ್, ಎನ್ಸಿಪಿ, ಡಿಎಂಕೆ ಮತ್ತು ಇತರೆ ಎಡಪಕ್ಷಗಳ ಮುಖಂಡರು ಭಾಗಿಯಾಗಿದ್ದರು.
ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗ್ತಿದ್ದು, ಇದರಿಂದ ಜನಸಾಮಾನ್ಯರ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ದೇಶದ ಜನರು ಜೀವನ ನಡೆಸಲು ಕಷ್ಟಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಗತ್ಯ ವಸ್ತುಗಳಾದ ಮೊಸರು, ಬ್ರೆಡ್, ಪನ್ನೀರ್ನಂತಹ ಉತ್ಪನ್ನಗಳ ಜಿಎಸ್ಟಿ ಏರಿಕೆ ಮಾಡಿರುವುದು ಸರಿಯಲ್ಲ. ತಕ್ಷಣವೇ ಬೆಲೆ ಏರಿಕೆ ನಿರ್ಧಾರ ಹಿಂಪಡೆದುಕೊಳ್ಳುವಂತೆ ಆಗ್ರಹಿಸಿದರು.
ಸಂಸತ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಮತ್ತಿತರರು ಉಪಸ್ಥಿತರಿದ್ದರು.