ಭೋಪಾಲ್(ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು 1,230 ಪರವಾನಿಗೆ ಇಲ್ಲದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ, 19,283 ಜನರ ವಿರುದ್ಧ ಜಾಮೀನುರಹಿತ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ಚುನಾವಣಾಧಿಕಾರಿ ತಿಳಿಸಿದರು.
ವಿವಿಧ ನಗರಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮತದಾರರಿಗೆ ಹಂಚಲು ಶೇಖರಿಸಿಟ್ಟಿದ್ದ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಧಾರ್ ಜಿಲ್ಲೆಯಲ್ಲಿ ಗರಿಷ್ಠ 12,802 ಲೀಟರ್ ಮದ್ಯ ಜಪ್ತಿ ಮಾಡಲಾಗಿದೆ. ಮತ ಪ್ರಚಾರ ಹಾಗೂ ಮತದಾನದ ಸಂದರ್ಭಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯುವುದನ್ನು ತಡೆಯಲು 2,57,945 ಪರವಾನಿಗೆ ಹೊಂದಿರುವ ಆಯುಧಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.