ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಕ್ಯಾತೆ ತೆಗೆದಿದೆ. ಈ ಕ್ಯಾತೆಗೆ ಭಾರತ ತಕ್ಕ ಪ್ರತಿಕ್ರಿಯೆ ನೀಡಿದೆ. ಸುದ್ದಿಗೋಷ್ಠಿಯೊಂದರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ಪಾಕಿಸ್ತಾನಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದಾಗ ಅಲ್ಲಿ ಸಿಕ್ಕ ಅದ್ಧೂರಿ ಸ್ವಾಗತ ಮತ್ತು ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ಆಗಿರುವ ಬದಲಾವಣೆಗಳ ಮೂಲಕ ನಿಮ್ಮ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ಸಿಕ್ಕಿದೆ ಎಂದು ಅರಿಂದಮ್ ಬಾಗ್ಚಿ ಹೇಳಿದ್ದಾರೆ. ಪ್ರಧಾನಿಯವರು ಉದ್ಘಾಟಿಸಿದ ಅಭಿವೃದ್ಧಿ ಯೋಜನೆಗಳು ಮತ್ತು ಆ ನೆಲದಲ್ಲಿ ಆಗಿರುವ ಬದಲಾವಣೆಗಳು ಸ್ಪಷ್ಟ ಉತ್ತರವಾಗಿದ್ದು, ಯಾವುದೇ ಸಂದರ್ಭದಲ್ಲಿ ಪಾಕಿಸ್ತಾನ ಅದರದೇ ಆದ ದೃಷ್ಟಿಕೋನದಿಂದ ಮಾತನಾಡಲು ಅಧಿಕಾರವಿಲ್ಲ ಎಂದಿದ್ದಾರೆ.