ಹೈದರಾಬಾದ್:ತೆಲಂಗಾಣದ ಜನರು ರಾಜ್ಯದ ಪ್ರಗತಿ ಹಾಗೂ ಅಭಿವೃದ್ಧಿಗಾಗಿ ಬದಲಾವಣೆ ಆಗಬೇಕು ಎಂದು ನಿರ್ಧರಿಸಿದ್ದಾರೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆ ಹೈದರಾಬಾದ್ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಅವರು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಟೀಮ್ ಲೀಡರ್ ಆಗಿದ್ದಾರೆ. ಮುಖ್ಯಮಂತ್ರಿ ಯಾರು ಎನ್ನುವುದರ ಬಗ್ಗೆ ನಮ್ಮ ಪಕ್ಷ ನಿರ್ಧಾರ ತೆಗೆದುಕೊಳ್ಳಲಿದೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಗೆಲುವಿಗಾಗಿ ಹೋರಾಡಲಾಗಿದೆ. ನಾನು ಕೆಸಿಆರ್ ಅಥವಾ ಕೆಟಿಆರ್ ಬಗ್ಗೆ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ತೆಲಂಗಾಣದ ಜನತೆ ಅವರಿಗೆ ಉತ್ತರ ನೀಡಿದ್ದಾರೆ ಎಂದು ಹೇಳಿದರು.