ಶಿಲ್ಲಾಂಗ್: ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ.ಸಂಗ್ಮಾ ಅವರ ನಿವಾಸದ ಮೇಲೆ ಭಾನುವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ರಾತ್ರಿ 10:15ರ ಸುಮಾರಿಗೆ ಈ ಘಟನೆ ನಡೆದಿದೆ. ವಾಹನದಲ್ಲಿ ಬಂದ ದುಷ್ಕರ್ಮಿಗಳು ಅಪ್ಪರ್ ಶಿಲಾಂಗ್ನ ಮೂರನೇ ಮೈಲ್‌ನಲ್ಲಿರುವ ಸಿಎಂ ನಿವಾಸದ ಮೇಲೆ ಬಾಂಬ್ ಎಸೆದಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಮೊದಲ ಬಾಟಲಿಯನ್ನು ಸಿಎಂ ಮನೆಯ ಮುಂಭಾಗದಲ್ಲಿ ಎಸೆಯಲಾಗಿದೆ, ಎರಡನೆಯದನ್ನು ಹಿಂಭಾಗದಲ್ಲಿ ಎಸೆದಿದ್ದಾರೆ. ಅಲ್ಲಿನ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯ ರಾಜಧಾನಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿಧ್ವಂಸಕ ನಡೆದಿರುವ ಕಾರಣ ರಾಜ್ಯ ಸರ್ಕಾರ ಕರ್ಫ್ಯೂ ವಿಧಿಸಿದೆ. ಮತ್ತು ನಾಲ್ಕು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.