ನವದೆಹಲಿ: ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ನಿಂದ ಗ್ರಾಹಕರ ಜೇಬಿಗೆ ಇನ್ನಿಲ್ಲದ ಕತ್ತರಿ ಬೀಳುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬರುವ ಶುಕ್ರವಾರ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
ಶುಕ್ರವಾರದಂದು 45ನೇ GST ಕೌನ್ಸಿಲ್ ಸಭೆ ನಡೆಯಲಿದ್ದು, ಪೆಟ್ರೋಲ್, ಡೀಸೆಲ್ ಸೇರಿದಂತೆ ಇತರೆ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ(GST) ವ್ಯಾಪ್ತಿಗೊಳಪಡಿಸುವ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಒಂದೇ ರಾಷ್ಟ್ರೀಯ ದರದ ಅಡಿಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆ ಪರಿಗಣಿಸುವ ಸಾಧ್ಯತೆ ದಟ್ಟವಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಈ ಕೌನ್ಸಿಲ್ ಸಭೆ ನಡೆಯಲಿದ್ದು, ಬಹುದೊಡ್ಡ ಬದಲಾವಣೆ ಬರುವ ಸಾಧ್ಯತೆ ಇದೆ.