ನವದೆಹಲಿ: 2002ರ ಗುಜರಾತ್ ಗಲಭೆ ಕುರಿತು ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ಒಪ್ಪಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ವಕೀಲ ಎಂ ಎಲ್ ಶರ್ಮಾ ಮತ್ತು ಹಿರಿಯ ವಕೀಲ ಸಿ ಯು ಸಿಂಗ್ ಅವರು ಈ ವಿಷಯದ ಕುರಿತು ತಮ್ಮ ಪ್ರತ್ಯೇಕ ಪಿಐಎಲ್‌ಗಳನ್ನು ತುರ್ತು ಪಟ್ಟಿ ಮಾಡುವಂತೆ ಕೋರಿ ಸಲ್ಲಿಸಿದ ಅರ್ಜಿಗಳನ್ನು ಗಣನೆಗೆ ತೆಗೆದುಕೊಂಡಿತು. ಫೆಬ್ರವರಿ 6 ರಂದು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.
ವಿಚಾರಣೆಯ ಆರಂಭದಲ್ಲಿ, ವೈಯಕ್ತಿಕವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ವಕೀಲ ಶರ್ಮಾ ತಮ್ಮ ಮನವಿಯನ್ನು ಪ್ರಸ್ತಾಪಿಸಿ, ಜನರನ್ನು ಬಂಧಿಸಲಾಗುತ್ತಿದೆ ಎಂದು ಹೇಳಿದರು. ಇದನ್ನು ಸೋಮವಾರ ಪಟ್ಟಿ ಮಾಡಲಾಗುವುದು ಎಂದು ಸಿಜೆಐ ತಿಳಿಸಿದರು. ಹಿರಿಯ ಪತ್ರಕರ್ತ ಎನ್ ರಾಮ್ ಮತ್ತು ಹೋರಾಟಗಾರ ವಕೀಲ ಪ್ರಶಾಂತ್ ಭೂಷಣ್ ಅವರು ಸಲ್ಲಿಸಿದ ಪ್ರತ್ಯೇಕ ಅರ್ಜಿಗಳ ಬಗ್ಗೆ ಹಿರಿಯ ವಕೀಲ ಸಿ ಯು ಸಿಂಗ್ ಪ್ರಸ್ತಾಪಿಸಿದರು.
ಟ್ವೀಟ್ ಡಿಲೀಟ್ ಮಾಡಿರುವ ಬಗ್ಗೆ ಪ್ರಸ್ತಾಪ:ತುರ್ತು ಅಧಿಕಾರವನ್ನು ಬಳಸಿಕೊಂಡು ರಾಮ್ ಮತ್ತು ಭೂಷಣ್ ಮಾಡಿದ ಟ್ವೀಟ್‌ಗಳನ್ನು ಡಿಲೀಟ್ ಮಾಡಿರುವ ಬಗ್ಗೆ ವಕೀಲ ಸಿ ಯು ಸಿಂಗ್ ಉಲ್ಲೇಖಿಸಿದರು. ಬಿಬಿಸಿ ಸಾಕ್ಷ್ಯಚಿತ್ರ ಸ್ಟ್ರೀಮಿಂಗ್ ಮಾಡಿದ್ದಕ್ಕಾಗಿ ಅಜ್ಮೀರ್‌ನ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಲಾಗಿದೆ ಎಂದು ಅವರು ಹೇಳಿದರು. ಇದರ ನಂತರ ಅರ್ಜಿ ವಿಚಾರಣೆಯನ್ನು ನಾವು ಪಟ್ಟಿ ಮಾಡುತ್ತೇವೆ ಎಂದು ಸಿಜೆಐ ಹೇಳಿದರು. ಸಾಕ್ಷ್ಯಚಿತ್ರ ನಿರ್ಬಂಧಿಸುವ ಕೇಂದ್ರದ ನಿರ್ಧಾರದ ವಿರುದ್ಧ ವಕೀಲ ಶರ್ಮಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು.