ನವದೆಹಲಿ:ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗಳನ್ನು ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಈ ಕುರಿತು ಪ್ರತಿಕ್ರಿಯಿಸಿ, ಎರಡು ದಿನ ಕಾಯಿರಿ ಎಂದಷ್ಟೇ ತಿಳಿಸಿದರು. ಹಿರಿಯ ವಕೀಲೆ ಮೀನಾಕ್ಷಿ ಅರೋರಾ, ಹಿಜಾಬ್ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ವಿಚಾರವನ್ನು ಸುಪ್ರೀಂಕೋರ್ಟ್‌ನಲ್ಲಿಂದು ಪ್ರಸ್ತಾಪಿಸಿದರು.
ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು: ಕರ್ನಾಟಕದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರನ್ನೊಳಗೊಂಡ ಕರ್ನಾಟಕ ಹೈಕೋರ್ಟ್ ನ್ಯಾಯಪೀಠವು ವಿದ್ಯಾರ್ಥಿಗಳು ಸಮವಸ್ತ್ರವನ್ನು ಆಕ್ಷೇಪಿಸುವಂತಿಲ್ಲ ಎಂದಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ್ದ ವಿವಿಧ ಅರ್ಜಿಗಳನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿಗಳನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಮಾರ್ಚ್ ತಿಂಗಳಲ್ಲಿ ನಿರಾಕರಿಸಿತ್ತು.