ನವದೆಹಲಿ: ಗುಜರಾತ್ನ ಸೂರತ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಸೂರತ್‌ನಲ್ಲಿ ನಡೆದ ಟ್ರಕ್ ಅಪಘಾತದಲ್ಲಿ ಅಷ್ಟು ಮಂದಿ ಪ್ರಾಣ ಕಳೆದುಕೊಂಡಿರುವುದು ನಿಜಕ್ಕೂ ಒಂದು ದುರಂತವಾಗಿದೆ. ದುಃಖಿತ ಕುಟುಂಬಗಳಿಗೆ ನನ್ನ ಸಾಂತ್ವನ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಬೇಕೆಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಪಿಎಂ ಮೋದಿ ಹೇಳಿದ್ದಾರೆ.
ಮೃತರ ಸಂಬಂಧಿಗಳಿಗೆ ಪಿಎಂಎನ್‌ಆರ್‌ಎಫ್ (ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ)ಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಇದನ್ನೂ ಓದಿ: ಕರ್ನಾಟಕದ ಬಳಿಕ ಗುಜರಾತ್ನಲ್ಲಿ ಭೀಕರ ರಸ್ತೆ ಅಪಘಾತ... ಟ್ರಕ್ ಹರಿದು 15 ಕೂಲಿ ಆಳುಗಳು ಬಲಿ!
ಗುಜರಾತ್ ಸಿಎಂ ವಿಜಯ್ ರೂಪಾನಿ ಕೂಡ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಸಿಎಂ ಪರಿಹಾರ ನಿಧಿಯಿಂದ ಮೃತರ ಸಂಬಂಧಿಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ನೆರವು ನೀಡಿದ್ದಾರೆ.
ಇಂದು ನಸುಕಿನ ಜಾವ ಸೂರತ್‌ನಲ್ಲಿ ಫುಟ್ಪಾತ್ನಲ್ಲಿ ಮಲಗಿದ್ದ ಸುಮಾರು 20 ಕಾರ್ಮಿಕರ ಮೇಲೆ ಟ್ರಕ್ ಹರಿದು, 15 ಮಂದಿ ಮೃತಪಟ್ಟಿದ್ದರು. ಐವರ ಸ್ಥತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಟ್ರಕ್ ಡಿಕ್ಕಿ ಹೊಡೆದಿದ್ದು, ನಿಯಂತ್ರಣ ಕಳೆದುಕೊಂಡ ಚಾಲಕ ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಟ್ರಕ್ ಹರಿಸಿದ ಪರಿಣಾಮ ಈ ದುರಂತ ಸಂಭವಿಸಿದೆ.