ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ಮಹತ್ವದ ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆ ನಡೆಯಿತು. 'ವಿಕ್ಷಿತ್ ಭಾರತ್ @2047: ಟೀಂ ಇಂಡಿಯಾದ ಪಾತ್ರ' ಎಂಬ ಧ್ಯೇಯದ ಮೇಲೆ ಈ ಸಭೆ ಜರುಗಿತು. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳು ಸಭೆಯ ಪ್ರಮುಖ ಅಂಶಗಳಾಗಿದ್ದವು.
ರಾಷ್ಟ್ರ ರಾಜಧಾನಿ ದೆಹಲಿಯ ಪ್ರಗತಿ ಮೈದಾನದಲ್ಲಿರುವ ಹೊಸ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ನೀತಿ ಆಯೋಗದ ಅಧ್ಯಕ್ಷರಾದ ಪ್ರಧಾನಿ ಮೋದಿ ವಹಿಸಿದ್ದರು. ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಇದೇ ವೇಳೆ ಹತ್ತು ರಾಜ್ಯಗಳ ಮುಖ್ಯಮಂತ್ರಿಗಳು ಸಭೆಗೆ ಗೈರಾದರು.
ಸಭೆಗೆ ಹಾಜರಾದ ಸಿಎಂಗಳು: ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಅಸ್ಸೋಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ, ಹರಿಯಾಣ ಮುಖ್ಯಮುಂತ್ರಿ ಮನೋಹರ್ ಲಾಲ್ ಖಟ್ಟರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದ್ ಸಿಂಗ್ ಸುಖು, ಗುಜರಾತ್ ಮುಖ್ಯಮಂತ್ರಿ ಭುಪೇಂದ್ರ ಭಾಯ್ ಪಟೇಲ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್ ಚವ್ಹಾಣ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ತ್ರಿಪುರ ಮುಖ್ಯಮಂತ್ರಿ ಮಣಿಕ್ ಶಹಾ ಹಾಗೂ ನಾಗಾಲ್ಯಾಂಡ್, ಸಿಕ್ಕಿಂ ಮುಖ್ಯಮಂತ್ರಿಗಳು ಸೇರಿ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಗೆ ಗೈರಾದ ಸಿಎಂಗಳು:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಗೆ ಹಾಜರಾಗಲಿಲ್ಲ.
ತಮಿಳುನಾಡು ಸಿಎಂ ಸ್ವಾಲಿನ್ ಜಪಾನ್ ಮತ್ತು ಸಿಂಗಾಪುರ ಪ್ರವಾಸದಲ್ಲಿದ್ದರೆ, ಕರ್ನಾಟಕ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ತಮ್ಮ ಅನುಪಸ್ಥಿತಿಗೆ ಆರೋಗ್ಯ ಕಾರಣವನ್ನು ನೀಡಿದ್ದರೆ, ಕೇರಳ ಸಿಎಂ ವಿಜಯನ್ ಯಾವುದೇ ಕಾರಣವನ್ನು ಕೊಟ್ಟಿಲ್ಲ.