ನವದೆಹಲಿ:ಹೃದಯಾಘಾತದಿಂದ ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ ಪೊರೈಕೆ ಸಚಿವ ಉಮೇಶ್ ಕತ್ತಿ(61) ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದು, ಸಂತಾಪ ತಿಳಿಸಿದ್ದಾರೆ.
'ಕರ್ನಾಟಕದ ಅಭಿವೃದ್ಧಿಗೆ ಶ್ರೀ ಉಮೇಶ್ ಕತ್ತಿ ಜೀ ಅವರು ಉತ್ಕೃಷ್ಟ ಕೊಡುಗೆ ನೀಡಿದ್ದು, ಅವರು ಓರ್ವ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುರಂತದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗಿವೆ' ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ವಿಧಿವಶ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹ ಟ್ವೀಟ್ ಮಾಡಿದ್ದು, ಉಮೇಶ್ ಕತ್ತಿ ಅವರ ಅಕಾಲಿಕ ನಿಧನ ಅತೀವ ದುಖವನ್ನುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ. ನಿಧನದ ದುಃಖವನ್ನು ಸಹಿಸುವ ಶಕ್ತಿಯನ್ನು ಬಂಧು ಮಿತ್ರರಿಗೆ ನೀಡಲಿ ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಕಳೆದ ರಾತ್ರಿ ಭೋಜನ ಸೇವಿಸಿದ ಬಳಿಕ ಬಾತ್ ರೂಂನಲ್ಲಿ ಸಚಿವರು ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ಸಮೀಪದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಆದರೆ, ಅಷ್ಟರಲ್ಲೇ ಅವರ ಪ್ರಾಣಪಕ್ಷಿ ಹಾರಿಹೋಗಿದೆ.