ನವದೆಹಲಿ: ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿನ ಭದ್ರತಾ ಪರಿಸ್ಥಿತಿ ಕುರಿತು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಇಂದು ಉನ್ನತ ಮಟ್ಟದ ಸಭೆ ನಡೆಸಿ, ಸಂಕಷ್ಟದಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸುಡಾನ್‌ನಲ್ಲಿ ಪ್ರಸ್ತುತ ಇರುವ 3,000ಕ್ಕೂ ಹೆಚ್ಚು ಭಾರತೀಯರ ಸುರಕ್ಷತೆ ಬಗ್ಗೆ ನಿರ್ದಿಷ್ಟವಾಗಿ ಗಮನಹರಿಸುವಂತೆ ತಿಳಿಸಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.
ಇದನ್ನೂ ಓದಿ:ಸುಡಾನ್‌ನಲ್ಲಿ ಸಿಲುಕಿದ ಕನ್ನಡಿಗರು: ಸಿದ್ದರಾಮಯ್ಯ- ಜೈಶಂಕರ್ ಮಧ್ಯೆ ಟ್ವೀಟ್ ವಾರ್
ಸುಡಾನ್‌ನಲ್ಲಿ ಕಳೆದ ಎಂಟು ದಿನಗಳಿಂದ ಸೇನೆ ಮತ್ತು ಅರೆಸೇನಾ ಗುಂಪುಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಇದರಿಂದ ಸುಮಾರು 300 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಂಘರ್ಷಪೀಡಿತ ದೇಶದಲ್ಲಿ ಭಾರತೀಯರು ಸಿಲುಕಿಕೊಂಡಿದ್ದಾರೆ. ಸುಡಾನ್‌ನಲ್ಲಿ ವೇಗವಾಗಿ ಬದಲಾಗುತ್ತಿರುವ ಭದ್ರತಾ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ ಸ್ಥಳಾಂತರಿಸುವ ಯೋಜನೆಗಳನ್ನು ತಯಾರಿಸಲು ಪ್ರಧಾನಿ ಅಧಿಕಾರಿಗಳಿಗೆ ಸೂಚಿಸಿದರು ಎಂದು ಪಿಎಂಒ ಹೇಳಿದೆ.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆದ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್.ಹರಿಕುಮಾರ್, ಸುಡಾನ್‌ನಲ್ಲಿರುವ ಭಾರತೀಯ ರಾಯಭಾರಿ ಮತ್ತು ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಇದನ್ನೂ ಓದಿ:ಸೇನಾ ಸಂಘರ್ಷ.. ಸುಡಾನ್‌ನಲ್ಲಿ ಸಿಲುಕಿರುವ ಹಕ್ಕಿಪಿಕ್ಕಿ ಜನಾಂಗದ ಕನ್ನಡಿಗರು: ನೆರವಿಗಾಗಿ ಸರ್ಕಾರಕ್ಕೆ ಮನವಿ
ಸಭೆಯಲ್ಲಿ ಪ್ರಧಾನಿ ಮೋದಿ ಸುಡಾನ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳನ್ನು ಮೌಲ್ಯಮಾಪನ ಮಾಡಿದರು. ಭಾರತೀಯ ಪ್ರಜೆಗಳ ಸುರಕ್ಷತೆಯನ್ನು ನಿರಂತರವಾಗಿ ಗಮನಹರಿಸಿ, ಅವರಿಗೆ ಸಾಧ್ಯವಿರುವ ಎಲ್ಲ ರೀತಿಯ ಸಹಾಯ ಮಾಡಬೇಕು. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಅಲರ್ಟ್ ಆಗಿರಬೇಕು ಮತ್ತು ಅಲ್ಲಿನ ಬೆಳವಣಿಗೆಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಬೇಕೆಂದು ಸೂಚಿಸಿದ್ದಾರೆ. ಇದೇ ವೇಳೆ, ಸುಡಾನ್ ನೆರೆಯ ರಾಷ್ಟ್ರಗಳೊಂದಿಗೆ ಮತ್ತು ಸುಡಾನ್‌ನಲ್ಲಿ ಗಮನಾರ್ಹ ಸಂಖ್ಯೆಯ ನಾಗರಿಕರನ್ನು ಹೊಂದಿರುವವರ ರಾಷ್ಟ್ರಗಳೊಂದಿಗೂ ನಿಕಟ ಸಂವಹನ ಕಾಪಾಡಿಕೊಳ್ಳುವ ಪ್ರಾಮುಖ್ಯತೆಯನ್ನು ಮೋದಿ ಒತ್ತಿ ಹೇಳಿದರು ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.
ಇದನ್ನೂ ಓದಿ:ಸುಡಾನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಬುಡಕಟ್ಟು ಜನರನ್ನು ಸುರಕ್ಷಿತವಾಗಿ ಕರೆತನ್ನಿ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
ಮತ್ತೊಂದೆಡೆ, ವಿದೇಶಾಂಗ ಸಚಿವ ಜೈಶಂಕರ್ ಈಗಾಗಲೇ ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಈಜಿಪ್ಟ್‌ನ ತಮ್ಮ ವಿದೇಶಾಂಗ ಸಚಿವರೊಂದಿಗೆ ಮಾತುಕತೆ ನಡೆಸಿ,ಸುಡಾನ್‌ನಲ್ಲಿನ ಪರಿಸ್ಥಿತಿಯ ಕುರಿತು ಮತ್ತು ಭಾರತೀಯರ ಸುರಕ್ಷತೆಯನ್ನು ಖಾತ್ರಿಪಡಿಸುವ ಬಗ್ಗೆ ಗಮನಹರಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಗುರುವಾರ ಸುಡಾನ್‌ನಲ್ಲಿ ಪರಿಸ್ಥಿತಿ ತುಂಬಾ ಉದ್ವಿಗ್ನವಾಗಿದೆ. ಭಾರತವು ಅಲ್ಲಿನ ಭಾರತೀಯರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವತ್ತ ಗಮನಹರಿಸುತ್ತಿದೆ ಎಂದು ಹೇಳಿಕೆ ನೀಡಿದ್ದರು.
ಇದನ್ನೂ ಓದಿ:ಸುಡಾನ್‌ನಲ್ಲಿ ಮೈಸೂರಿನ ಜನರು ಸಿಲುಕಿರುವ ಶಂಕೆ: ಮಾಹಿತಿ ನೀಡಲು ಡಿಸಿ ಮನವಿ