ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಸೇರಿದಂತೆ ಇತರೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಲು ಜೂನ್ 24ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆದಿದ್ದಾರೆ. 2019ರಲ್ಲಿ ಆರ್ಟಿಕಲ್-370 ರದ್ದುಗೊಳಿಸಿದ ಬಳಿಕ ಕಾಶ್ಮೀರದ ನಾಯಕರೊಂದಿಗೆ ಪ್ರಧಾನಿ ನಡೆಸುತ್ತಿರುವ ಮೊದಲ ಸಭೆ ಇದಾಗಿದೆ.
ಮುಂದಿನ ವಾರ ನಡೆಯಲಿರುವ ಸಭೆಯ ಬಗ್ಗೆ ಈಗಾಗಲೇ ತಿಳಿಸಲಾಗಿದ್ದು, ಔಪಚಾರಿಕ ಆಹ್ವಾನಕ್ಕಾಗಿ ಕಾಯುತ್ತಿದ್ದೇವೆ ಎಂದು ಜಮ್ಮು ಮತ್ತು ಕಾಶ್ಮೀರದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆಯಷ್ಟೇ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಭದ್ರತಾ ಮತ್ತು ಗುಪ್ತಚರ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು.
ಇದನ್ನೂ ಓದಿ: ಜೀವನದ ಓಟ ನಿಲ್ಲಿಸಿದ ಭಾರತದ 'ಫ್ಲೈಯಿಂಗ್ ಸಿಖ್' ಖ್ಯಾತಿಯ ಮಿಲ್ಖಾ ಸಿಂಗ್!
2019ರ ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370ನೇ ವಿಧಿಯನ್ನು ರದ್ದುಗೊಳಿಸಿತ್ತು. ಜೊತೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಗಿದೆ. ಈ ನಿರ್ಧಾರವನ್ನು ಸಂಸತ್‌ನಲ್ಲಿ ಪ್ರಕಟಿಸುವ ಮುನ್ನ ಮುಂಜಾಗ್ರತಾ ಕ್ರಮವಾಗಿ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ, ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ ಸೇರಿದಂತೆ ಪ್ರಮುಖ ನಾಯಕರನ್ನು ಗೃಹ ಬಂಧನದಲ್ಲಿ ಇಡಲಾಗಿತ್ತು. ಕೆಲ ತಿಂಗಳುಗಳ ನಂತರ ಬಿಡುಗಡೆ ಮಾಡಲಾಗಿದೆ.