ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 22ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ 10 ಲಕ್ಷ ಜನರನ್ನು ವಿವಿಧ ಹುದ್ದೆಗಳಿಗೆ ಭರ್ತಿ ಮಾಡುವ ರೋಜ್‌ಗಾರ್ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಇದೇ ಸಮಾರಂಭದಲ್ಲಿ 75 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ (ಪಿಎಂಒ) ತಿಳಿಸಿದೆ.
ಈ ಕುರಿತು ಗುರುವಾರ ಪಿಎಂಒ ಹೇಳಿಕೆ ಬಿಡುಗಡೆ ಮಾಡಿದ್ದು, ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಮತ್ತು ನಾಗರಿಕರ ಕಲ್ಯಾಣವನ್ನು ಖಾತ್ರಿಪಡಿಸುವ ಪ್ರಧಾನ ಮಂತ್ರಿಯವರ ಬದ್ಧತೆಯನ್ನು ನಿರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಹೇಳಿದೆ.
ಪ್ರಧಾನಿ ಮೋದಿಯವರ ನಿರ್ದೇಶನದ ಮೇರೆಗೆ ಕೇಂದ್ರದ ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳು ಮಂಜೂರಾದ ಹುದ್ದೆಗಳಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವ ಕಾರ್ಯ ಮಾಡುತ್ತಿವೆ. ದೇಶದಾದ್ಯಂತ ಕೇಂದ್ರ ಸರ್ಕಾರದ 38 ಸಚಿವಾಲಯಗಳ ವ್ಯಾಪ್ತಿಯಲ್ಲಿರುವ ಖಾಲಿ ಹುದ್ದೆಗಳಿಗೆ ಹೊಸ ನೇಮಕಾತಿ ನಡೆಸಲಾಗುತ್ತಿದೆ ಎಂದು ತಿಳಿಸಿದೆ.