ನವದೆಹಲಿ:ಈಚೆಗೆ ನಡೆದ ಪಂಚರಾಜ್ಯ ವಿಧಾನಸಭಾ ಚುನಾವಣೆಗಳ ಪೈಕಿ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಭರ್ಜರಿ ಜಯ ಸಾಧಿಸಿದ ಬಿಜೆಪಿ ತನ್ನ ಚಿತ್ತವನ್ನು ದಕ್ಷಿಣದತ್ತ ಹರಿಸಿದೆ. ಇದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರದಿಂದ ಎರಡು ದಿನಗಳ ಕಾಲ ತಮಿಳುನಾಡು, ಕೇರಳ, ಲಕ್ಷದ್ವೀಪ ಪ್ರವಾಸ ಕೈಗೊಂಡಿದ್ದಾರೆ.
ಮೋದಿ ಆಗಮನದ ಹಿನ್ನೆಲೆಯಲ್ಲಿ ತಮಿಳುನಾಡು ಬಿಜೆಪಿ ಭರ್ಜರಿ ತಯಾರಿ ನಡೆಸಿದೆ. ರಸ್ತೆಗಳಲ್ಲಿ ಬ್ಯಾನರ್‌ಗಳನ್ನು ಅಳವಡಿಸಿದೆ. ತಿರುಚಿರಾಪಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1,100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಹೊಸ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಭದ್ರತಾ ವ್ಯವಸ್ಥೆಯನ್ನು ಕಠಿಣಗೊಳಿಸಲಾಗಿದೆ.
ಸೋಮವಾರ ಹೇಳಿಕೆ ಬಿಡುಗಡೆ ಮಾಡಿರುವ ಪ್ರಧಾನಿ ಕಚೇರಿ, ತಿರುಚಿರಾಪಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಹೊಸ ಟರ್ಮಿನಲ್ ವಾರ್ಷಿಕವಾಗಿ 44 ಲಕ್ಷಕ್ಕೂ ಹೆಚ್ಚು, ನಿತ್ಯ 3,500 ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ಸಾಮರ್ಥ್ಯ ಹೊಂದಿದೆ. ಹೊಸ ಟರ್ಮಿನಲ್ ಅತ್ಯಾಧುನಿಕ ಸೌಕರ್ಯಗಳು ಮತ್ತು ಪ್ರಯಾಣಿಕರ ಅನುಕೂಲವಾಗುವ ವೈಶಿಷ್ಟ್ಯಗಳನ್ನು ಹೊಂದಿದೆ ಎಂದು ತಿಳಿಸಿದೆ. ಇದರ ಜೊತೆಗೆ, ತಮಿಳುನಾಡಿನಲ್ಲಿ 19,850 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಯೋಜನೆಗಳಿಂದ ಜನರಿಗೆ ಲಾಭ:ಪ್ರವಾಸಕ್ಕೂ ಮೊದಲು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ, ತಮಿಳುನಾಡು, ಲಕ್ಷದ್ವೀಪ ಮತ್ತು ಕೇರಳಕ್ಕೆ ಎರಡು ದಿನಗಳ ಪ್ರವಾಸ ಕೈಗೊಳ್ಳುವೆ. ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದೇನೆ. ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ವಿಮನಾ ನಿಲ್ದಾಣ ಟರ್ಮಿನಲ್ ಉದ್ಘಾಟಿಸುವೆ. ಭಾರತಿದಾಸನ್ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗುವೆ. ಇತರ ಅಭಿವೃದ್ಧಿ ಕಾಮಗಾರಿಗಳಿಗೂ ಚಾಲನೆ ನೀಡಲಾಗುವುದು. ಈ ಕಾಮಗಾರಿಗಳಿಂದ ಹಲವಾರು ಜನರಿಗೆ ಅನುಕೂಲವಾಗಲಿದೆ ಎಂದು ಪೋಸ್ಟ್ ಮಾಡಿದ್ದಾರೆ.
ಬಳಿಕ ಲಕ್ಷದ್ವೀಪಕ್ಕೆ ಭೇಟಿ ನೀಡಲಿರುವ ಅವರು ಕೊಚ್ಚಿ-ಲಕ್ಷದ್ವೀಪ ದ್ವೀಪಗಳ ಜಲಾಂತರ್ಗಾಮಿ ಆಪ್ಟಿಕಲ್ ಫೈಬರ್ ಸಂಪರ್ಕ (KLI - SOFC) ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ನಾನು ಲಕ್ಷದ್ವೀಪಕ್ಕೆ ಭೇಟಿ ನೀಡಲು ಎದುರು ನೋಡುತ್ತಿದ್ದೇನೆ. ಅಲ್ಲಿ 1150 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. ಇದರಿಂದ ಇಂಟರ್ನೆಟ್ ಸಂಪರ್ಕ, ಶುದ್ಧ ಕುಡಿಯುವ ನೀರು ಪೂರೈಕೆ, ಸೌರಶಕ್ತಿ, ಆರೋಗ್ಯ ಯೋಜನೆಗಳು ಜನರಿಗೆ ಸಿಗಲಿವೆ ಎಂದು ಪ್ರಧಾನಿ ಹೇಳಿದ್ದಾರೆ. ಬಳಿಕ ಕೇರಳಕ್ಕೆ ಭೇಟಿ ಅಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ:ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ನಾಲ್ವರ ಗುಂಡಿಕ್ಕಿ ಹತ್ಯೆ, 5 ಜಿಲ್ಲೆಗಳಲ್ಲಿ ಕರ್ಫ್ಯೂ