ನವದೆಹಲಿ:ದೇಶದಲ್ಲಿ ಮಹಾಮಾರಿ ಕೊರೊನಾ ಆರ್ಭಟ ಜೋರಾಗಿದೆ. ದಿನದಿಂದ ದಿನಕ್ಕೆ ಅತಿ ಹೆಚ್ಚಿನ ಸೋಂಕಿತ ಪ್ರಕರಣ ದಾಖಲಾಗುತ್ತಿವೆ. ಹೀಗಾಗಿ ಇಂದು ಸಂಜೆ 4:30ಕ್ಕೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ.
ಮೂರನೇ ಹಂತದ ಕೋವಿಡ್ ಅಲೆ ಅಬ್ಬರಿಸುತ್ತಿರುವ ಕಾರಣ ದೇಶದಲ್ಲಿ ಪ್ರತಿದಿನ ಲಕ್ಷಾಂತರ ಹೊಸ ಹೊಸ ಪ್ರಕರಣಗಳು ದಾಖಲಾಗುತ್ತಿದೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸೋಂಕು ಹರಡುವಿಕೆಯ ಪ್ರಮಾಣ ಜಾಸ್ತಿಯಾಗುತ್ತಿದೆ. ಪ್ರಮುಖವಾಗಿ ಮೆಟ್ರೋ ನಗರಿಗಳಾಗಿರುವ ಬೆಂಗಳೂರು, ಮುಂಬೈ, ನವದೆಹಲಿಯಲ್ಲಿ ಭಾರಿ ಪ್ರಮಾಣದಲ್ಲಿ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ, ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಹಾಗೂ ಮುಂದಿನ ಮಾರ್ಗಸೂಚಿ ಪಾಲನೆ ಬಗ್ಗೆ ಪ್ರಧಾನಿ ಸಲಹೆ-ಸೂಚನೆಗಳನ್ನು ನೀಡಲಿದ್ದಾರೆ.