ನವದೆಹಲಿ: ಭಾರತೀಯ ಜನತಾ ಪಾರ್ಟಿ(BJP) ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಅಭೂತಪೂರ್ವ ವಿಜಯ ಸಾಧಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಈ ವಿಚಾರವಾಗಿ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(J.P.Nadda), ಪ್ರಧಾನಿ ನರೇಂದ್ರ ಮೋದಿಯವರ ಜನಸ್ನೇಹಿ ಯೋಜನೆಗಳೇ ಈ ಗೆಲುವಿಗೆ ಮುಖ್ಯ ಕಾರಣ ಎಂದಿದ್ದಾರೆ.
ಟ್ವೀಟ್ ಮೂಲಕ ಮತದಾರರಿಗೆ ಅಭಿನಂದನೆ ಸಲ್ಲಿಸಿರುವ ನಡ್ಡಾ, ಭಾರತೀಯ ಜನತಾ ಪಾರ್ಟಿಯ ಮೇಲೆ ನಂಬಿಕೆ ಇಟ್ಟಿರುವುದಕ್ಕೆ ಧನ್ಯವಾದಗಳು. ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಕಲಬುರಗಿಯಲ್ಲಿ ನಮ್ಮ ಪಕ್ಷ ವಿಶೇಷ ಸಾಧನೆ ಮಾಡಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಕಾರ್ಯಕರ್ತರನ್ನು ನಡ್ಡಾ ಅಭಿನಂದಿಸಿದ್ದಾರೆ. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೂ ಅಭಿನಂದನೆ ತಿಳಿಸಿದ್ದಾರೆ. ರಾಜ್ಯ ನಾಯಕರ ಕಠಿಣ ಪರಿಶ್ರಮ ಹಾಗೂ ಬಿಜೆಪಿ ಕಾರ್ಯಕರ್ತರು ಅತ್ಯದ್ಭುತ ರೀತಿಯಲ್ಲಿ ಕೆಲಸ ಮಾಡಿದ್ದರಿಂದ ಗೆಲುವು ಸಿಕ್ಕಿದೆ ಎಂದಿದ್ದಾರೆ.