ಕರೌಲಿ :ರಾಜಸ್ಥಾನದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಕಾರ್ಯನಿರತ ಪೊಲೀಸ್ ಕಾನ್ಸ್ಟೇಬಲ್ನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕರೌಲಿ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಮಾಂಡ್ರಾಯಲ್ ಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ನನ್ನು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಪೊಲೀಸ್ ಹತ್ಯೆಯ ನಂತರ ಈ ಪ್ರದೇಶ ಉದ್ವಿಗ್ನಗೊಂಡಿತು. ಸುದ್ದಿ ತಿಳಿದ ಪೊಲೀಸ್ ಅಧಿಕಾರಿ ಸ್ಥಳಕ್ಕೆ ತಲುಪಿ ಪ್ರಕರಣದ ಬಗ್ಗೆ ಮಾಹಿತಿ ಪಡೆದರು.
ಏನಿದು ಘಟನೆ?ಮಾಂಡ್ರಾಯಲ್ ಪೊಲೀಸ್ ಠಾಣೆಯಲ್ಲಿ ಪೋಲಿಸ್ ಕಾನ್‌ಸ್ಟೆಬಲ್ ಗೋಕ್ಲೇಶ್ ಶರ್ಮಾ ಅವರು ರಾಧರಾಣಿ ಮಾರುಕಟ್ಟೆ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಭಾನುವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಕಾನ್ಸ್ಟೇಬಲ್ ತಲೆಗೆ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ್ದಾರೆ. ಅಷ್ಟೇ ಅಲ್ಲ, ಗಾಯಗೊಂಡು ನೆಲಕ್ಕೆ ಬಿದ್ದ ಗೋಕ್ಲೇಶ್ ಶರ್ಮಾನನ್ನು ದುಷ್ಕರ್ಮಿಗಳು ಮತ್ತೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸುದ್ದಿ ತಿಳಿದಾಕ್ಷಣವೇ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ ಮಾಹಿತಿ ಪಡೆದರು. ಕೆಲ ಕೊಲೆ ಆರೋಪಿಗಳ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸುತ್ತಿದ್ದು, ಆರೋಪಿಗಳ ಬಂಧಿಸುವ ಪ್ರಯತ್ನದಲ್ಲಿ ಪೊಲೀಸರು ಕಾರ್ಯ ನಡೆಸುತ್ತಿದ್ದಾರೆ.
ಸೋಮವಾರ ಮರಣೋತ್ತರ ಪರೀಕ್ಷೆಯ ನಂತರ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಆದರೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್‌ಸ್ಟೆಬಲ್‌ನನ್ನು ಅಮಾನುಷವಾಗಿ ಹತ್ಯೆಗೈದ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.