ನವದೆಹಲಿ: 2014ಕ್ಕಿಂತ ಮೊದಲು ಆಡಳಿತದಲ್ಲಿ ತಂತ್ರಜ್ಞಾನ ಬಳಕೆಯ ಕುರಿತು ಅಸಡ್ಡೆಯ ವಾತಾವರಣವಿತ್ತು. ಇದರಿಂದಾಗಿ ಬಡವರು ಮತ್ತು ಮಧ್ಯಮ ವರ್ಗದವರು ಹೆಚ್ಚು ತೊಂದರೆ ಅನುಭವಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ನಡೆಯುತ್ತಿರುವ 'ಭಾರತ್ ಡ್ರೋನ್ ಮಹೋತ್ಸವ 2022' ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು.
ಆದ್ರೆ ಈ ದಿನಮಾನಗಳಲ್ಲಿ ಡ್ರೋನ್ ತಂತ್ರಜ್ಞಾನದ ಬಗ್ಗೆ ಭಾರತದಲ್ಲಿ ಕಂಡುಬರುತ್ತಿರುವ ಉತ್ಸಾಹ ಅದ್ಭುತವಾಗಿದೆ. ಇದು ದೇಶದಲ್ಲಿ ಉದ್ಯೋಗ ಸೃಷ್ಟಿಯನ್ನು ಸೂಚಿಸುತ್ತಿದೆ. ಕಳೆದ ಎಂಟು ವರ್ಷಗಳಿಂದ ನಾವು ಹೊಸ ಹೊಸ ತಂತ್ರಜ್ಞಾಗಳನ್ನು ಜಾರಿಗೆ ತರಲು ಪ್ರಾರಂಭಿಸಿದ್ದೇವೆ. ನಮ್ಮ ಸರ್ಕಾರ ಬಡವರು ಮತ್ತು ಮಧ್ಯಮ ವರ್ಗದವರ ಕುರಿತು ಹೆಚ್ಚಿನ ಕಾಳಜಿ ವಹಿಸುತ್ತಿದೆ. ಅವರ ಜೀವನ ಮತ್ತು ವ್ಯವಹಾರವನ್ನು ಸುಲಭಗೊಳಿಸಲು ಆದ್ಯತೆ ನೀಡಲಾಗುತ್ತಿದೆ ಎಂದರು.
ಹಿಂದಿನ ಸರ್ಕಾರಗಳ ಅವಧಿಯಲ್ಲಿ ತಂತ್ರಜ್ಞಾನವನ್ನು ಸಮಸ್ಯೆಯ ಒಂದು ಭಾಗವೆಂದೇ ಪರಿಗಣಿಸಲಾಗಿತ್ತು. ಬಡವರ ವಿರೋಧಿ ಎಂಬ ಹಣೆಪಟ್ಟಿ ಕಟ್ಟಲಾಗಿತ್ತು. ಇದರಿಂದಾಗಿ 2014ಕ್ಕಿಂತ ಮೊದಲು ಆಡಳಿತದಲ್ಲಿ ತಂತ್ರಜ್ಞಾನದ ಬಳಕೆಯ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿತ್ತು. ಪರಿಣಾಮ ಬಡವರು, ವಂಚಿತರು, ಮಧ್ಯಮ ವರ್ಗದವರು ಹೆಚ್ಚು ತೊಂದರೆ ಅನುಭವಿಸಿದರು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.