ನವದೆಹಲಿ:ಕರ್ನಾಟಕದ ಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಕೇಂದ್ರೀಯ ತನಿಖಾ ದಳ (ಸಿಬಿಐ)ದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಗೆ ಅವರನ್ನು ನಿರ್ದೇಶಕರಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಹಾಲಿ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅವಧಿಯು ಮೇ 25ರಂದು ಕೊನೆಗೊಳ್ಳಲಿದೆ. ಹೀಗಾಗಿ, ಶನಿವಾರ ಪ್ರಧಾನಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯು ಸಿಬಿಐ ನಿರ್ದೇಶಕರ ಹುದ್ದೆಗೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಅಂತಿಮಗೊಳಿಸಿತ್ತು.
ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್, ಮಧ್ಯಪ್ರದೇಶದ ಡಿಜಿಪಿ ಸುಧೀರ್ ಸಕ್ಸೇನಾ ಮತ್ತು ಅಗ್ನಿಶಾಮಕ ಸೇವೆ, ನಾಗರಿಕ ರಕ್ಷಣಾ ಮತ್ತು ಗೃಹರಕ್ಷಕ ದಳದ ಮಹಾನಿರ್ದೇಶಕ ತಾಜ್ ಹಾಸನ್ ಅವರ ಹೆಸರು ಸಿಬಿಐ ನಿರ್ದೇಶರ ಹುದ್ದೆಗೆ ಮಂಚೂಣಿಯಲ್ಲಿತ್ತು. ಕರ್ನಾಟಕ ಕೇಡರ್ನ 1986ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಪ್ರವೀಣ್ ಸೂದ್ ನೇಮಕಗೊಂಡಿದ್ದಾರೆ.
ನೂತನ ಸಿಬಿಐ ನಿರ್ದೇಶಕರ ಬಗ್ಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆದೇಶ ಹೊರಡಿಸಿದ್ದು, ಕರ್ನಾಟಕ ಕೇಡರ್ನ 1986ರ ಬ್ಯಾಚ್ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಕೇಂದ್ರೀಯ ತನಿಖಾ ದಳದ ನಿರ್ದೇಶಕರಾಗಿ ನೇಮಕ ಮಾಡಲು ಸಕ್ಷಮ ಪ್ರಾಧಿಕಾರದ ಅನುಮೋದನೆ ನೀಡಿದೆ. ಮಹಾರಾಷ್ಟ್ರ ಕೇಡರ್ನ 1985ರ ಬ್ಯಾಚ್ನ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರಾವಧಿ ಪೂರ್ಣಗೊಂಡ ನಂತರ ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಎರಡು ವರ್ಷಗಳ ಅವಧಿಗೆ ಪ್ರವೀಣ್ ಸೂದ್ ನಿರ್ದೇಶಕರಾಗಿರಲಿದ್ದಾರೆ ಎಂದು ತಿಳಿಸಲಾಗಿದೆ.