ನವದೆಹಲಿ: ಒಡಿಶಾದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯ ಮಾಹಿತಿ ಹೊರಬಿದ್ದಿದೆ. ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್‌ಗೆ ಪ್ರವೇಶಿಸಿ ಬಹಾನಗರ್ ಬಜಾರ್ ನಿಲ್ದಾಣದ ಮುಂದೆ ನಿಲ್ಲಿಸಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಈ ಕೋರಮಂಡಲ್ ಎಕ್ಸ್‌ಪ್ರೆಸ್ ಬೋಗಿಗಳು ಚದುರಿ ಪಕ್ಕದ ಹಳಿ ಮೇಲೆ ಬಿದ್ದಿವೆ. ಆ ಬೋಗಿಗಳಿಗೆ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಕೋರಮಂಡಲ್ ಎಕ್ಸ್‌ಪ್ರೆಸ್ ಗಂಟೆಗೆ 128 ಕಿ. ಮೀ ವೇಗದಲ್ಲಿದ್ದರೆ, ಬೆಂಗಳೂರು - ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಗಂಟೆಗೆ 116 ಕಿ.ಮೀ ವೇಗದಲ್ಲಿ ಚಲಿಸುತ್ತಿತ್ತು. ಎರಡು ರೈಲುಗಳು ಸುಮಾರು 2,000 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದವು. ಈ ಪ್ರಾಥಮಿಕ ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಾರ್ಯಾಚರಣೆಯನ್ನು ಸುಲಭಗೊಳಿಸಲು ಮತ್ತು ಹೆಚ್ಚಿನ ರೈಲುಗಳಿಗೆ ಅವಕಾಶ ಕಲ್ಪಿಸಲು ಭಾರತೀಯ ರೈಲ್ವೆಯ ಲೂಪ್ ಲೈನ್‌ಗಳನ್ನು ನಿಲ್ದಾಣದ ಪ್ರದೇಶದಲ್ಲಿ ನಿರ್ಮಿಸಿದೆ. ಈ ಲೂಪ್ ಲೈನ್‌ಗಳು ಸಾಮಾನ್ಯವಾಗಿ 750 ಮೀಟರ್ ಉದ್ದ ಇರುತ್ತವೆ. ಬಹು ಇಂಜಿನ್‌ಗಳೊಂದಿಗೆ ಉದ್ದದ ಸರಕು ರೈಲುಗಳಿಗೆ ಅವಕಾಶ ಕಲ್ಪಿಸುತ್ತವೆ.
ಘಟನೆಯ ಪ್ರತ್ಯಕ್ಷದರ್ಶಿ ಅನುಭವ್ ದಾಸ್ ಪ್ರಕಾರ, ಸ್ಥಳೀಯ ಅಧಿಕಾರಿಗಳು ಮತ್ತು ರೈಲ್ವೆ ಅಧಿಕಾರಿಗಳು ಆರಂಭದಲ್ಲಿ ತಾನು ಪ್ರಯಾಣಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿಸಿದ್ದರು. ಆದರೆ, ಈ ಬಗ್ಗೆ ರೈಲ್ವೆ ಇಲಾಖೆಯು ಅಧಿಕೃತವಾಗಿ ದೃಢಪಡಿಸಿಲ್ಲ. ಕೂಲಂಕಷವಾಗಿ ತನಿಖೆ ನಡೆಯುತ್ತಿದ್ದರೂ ಇದುವರೆಗೆ ಯಾವುದೇ ಅಧಿಕಾರಿಗಳು ಈ ಬಗ್ಗೆ ಮಾತನಾಡಿಲ್ಲ.