ಲಖನೌ(ಉತ್ತರ ಪ್ರದೇಶ):ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ನಾಳೆಯಿಂದಲೇ ಪ್ರತಿಜ್ಞಾ ಯಾತ್ರೆ ಹಮ್ಮಿಕೊಳ್ಳಲು ಮುಂದಾಗಿದೆ. ಇದರ ಬೆನ್ನಲ್ಲೇ ಎಎನ್ಐ ಸುದ್ದಿಸಂಸ್ಥೆಗೆ ಉತ್ತರಪ್ರದೇಶ ಕಾಂಗ್ರೆಸ್ ಉಸ್ತುವಾರಿಯಾಗಿರುವ ಪ್ರಿಯಾಂಕಾ ವಿಶೇಷ ಸಂದರ್ಶನದಲ್ಲಿ ಭಾಗಿಯಾಗಿ ಮಾತನಾಡಿದ್ದಾರೆ.
'ಒಂದು ದಿನ ನಾನು ರಾಯಬರೇಲಿ ಅಥವಾ ಅಮೇಥಿ ಕ್ಷೇತ್ರದಿಂದ ಸ್ಪರ್ಧೆ ಮಾಡಲೇಬೇಕು. ಆದರೆ, ಇದರ ಬಗ್ಗೆ ಈವರೆಗೆ ಯಾವುದೇ ರೀತಿಯ ನಿರ್ಧಾರ ಕೈಗೊಂಡಿಲ್ಲ' ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. 2022ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಬಗ್ಗೆ ಈವರೆಗೆ ಯಾವುದೇ ರೀತಿಯ ನಿರ್ಧಾರ ಕೈಗೊಂಡಿಲ್ಲ. ಇದಕ್ಕೆಲ್ಲ ಸಮಯವೇ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿಯಾಗಿರುವ ಪ್ರಿಯಾಂಕಾ ಗಾಂಧಿ, ಈಗಾಗಲೇ ಆಡಳಿತರೂಢ ಬಿಜೆಪಿ ಪಕ್ಷದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಯೋಗಿ ಸರ್ಕಾರದ ವಿರುದ್ಧ ಮೇಲಿಂದ ಮೇಲೆ ಹರಿಹಾಯುತ್ತಿದ್ದಾರೆ. ಲಖೀಂಪುರ ಖೇರಿಯಲ್ಲಿ ನಡೆದಿರುವ ರೈತರ ಹತ್ಯೆ ಪ್ರಕರಣ, ಯೋಗಿ ಸರ್ಕಾರದ ದುರಾಡಳಿತ ಸೇರಿದಂತೆ ಅನೇಕ ಜ್ವಲಂತ ಸಮಸ್ಯೆ ಮುಂದಿಟ್ಟುಕೊಂಡು ವಾಗ್ದಾಳಿ ನಡೆಸುತ್ತಿದ್ದಾರೆ.