ಚಂಡೀಗಢ(ಪಂಜಾಬ್):ಕಳೆದ ಕೆಲ ತಿಂಗಳಿಂದ ಪಂಜಾಬ್ ಕಾಂಗ್ರೆಸ್‌ನಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿಗೆ ಕೊನೆಗೂ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ತಲೆದಂಡವಾಗಿದ್ದು, ಸಿಎಂ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜ್ಯಪಾಲ ಬನ್ವರ್ಲಾಲ್ ಪುರೋಹಿತ್ ಅವರನ್ನ ಭೇಟಿ ಮಾಡಿ ರಾಜೀನಾಮೆ ಸಲ್ಲಿಕೆ ಮಾಡಿದರು.
ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಅಮರಿಂದರ್ ಸಿಂಗ್ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ನಡುವೆ ಮನಸ್ತಾಪವಿತ್ತು. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ವಿರೋಧದ ಹೊರತಾಗಿಯೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಂಜಾಬ್ ಕಾಂಗ್ರೆಸ್ ಘಟಕದ ಹೊಸ ಅಧ್ಯಕ್ಷರನ್ನಾಗಿ ಸಿಧು ಅವರನ್ನು ನೇಮಕ ಮಾಡಿದ್ದರು.
ಇದಾದ ಬಳಿಕ ಅಮರಿಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು ಭೇಟಿ ಮಾಡಿ, ನಮ್ಮ ನಡುವೆ ಯಾವುದೇ ರೀತಿಯ ಮನಸ್ತಾಪ ಇಲ್ಲ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು.
ಮುಂದಿನ ವರ್ಷ ಪಂಜಾಬ್ ಚುನಾವಣೆ
ಪಂಜಾಬ್ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದರ ಬೆನ್ನಲ್ಲೇ ಮಹತ್ವದ ರಾಜಕೀಯ ಬೆಳವಣಿಗೆ ನಡೆದು, ಸಿಎಂ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸಿಧು ಸಿಎಂ ಅಭ್ಯರ್ಥಿಯಾಗುವ ಸಾಧ್ಯತೆಯಿದೆ ಬಹುತೇಕ ಖಚಿತವಾಗಿದೆ.
ಹೀಗಾಗಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿ, ನವಜೋತ್ ಸಿಂಗ್ ಸಿಧು ಅವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಿಧುಗೆ ಸಹಾಯ ಮಾಡಲು ಪಂಜಾಬ್ ಕಾಂಗ್ರೆಸ್‌ನಲ್ಲಿ ನಾಲ್ಕು ಕಾರ್ಯಕಾರಿ ಅಧ್ಯಕ್ಷರನ್ನು ನೇಮಕ ಸಹ ಮಾಡಲಾಗಿದೆ.
ಇದನ್ನೂ ಓದಿರಿ:ಅಂತೂ ಕ್ಯಾಪ್ಟನ್ ಭೇಟಿಯಾದ ಸಿಧು.. ಮುಂದಿನ ಸಿಎಂ ಅಭ್ಯರ್ಥಿಯಾಗ್ತಾರಾ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ?
ಹೈಕಮಾಂಡ್ನಿಂದ ಅಮರಿಂದರ್ ಸಿಂಗ್ ಮೇಲೆ ಒತ್ತಡ
ಲಭ್ಯವಾಗಿರುವ ಮಾಹಿತಿ ಪ್ರಕಾರ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಖುದ್ದಾಗಿ ಕಾಂಗ್ರೆಸ್ ಹೈಕಮಾಂಡ್ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಮೇಲೆ ಒತ್ತಡ ಹೇರಿತ್ತು ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿತ್ತು ಎಂದು ತಿಳಿದು ಬಂದಿದೆ. ಪಂಜಾಬ್ ಕಾಂಗ್ರೆಸ್ನ 40 ಶಾಸಕರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಸಿಎಂ ಬದಲಾವಣೆಗೆ ಪಟ್ಟು ಹಿಡಿದಿದ್ದರು.
ಸಿಎಂ ರೇಸ್ನಲ್ಲಿ ಯಾರು?
ಪಂಜಾಬ್ ಮುಖ್ಯಮಂತ್ರಿ ರೇಸ್ನಲ್ಲಿ ಇದೀಗ ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಸುನಿಲ್ ಜಖರ್, ಲುಧಿಯಾನಾ ಸಂಸದ ರವನೀತ್ ಸಿಂಗ್, ರಾಜ್ಯಸಭಾ ಸಂಸದ ಪರ್ತಪ್ ಸಿಂಗ್ ಬಾಜ್ವಾ ಇದ್ದಾರೆ. ಆದರೆ, ಈಗಾಗಲೇ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ನವಜೋತ್ ಸಿಂಗ್ ಸಿಧುಗೂ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ. ಪಂಜಾಬ್ ಶಾಸಕಾಂಗ ಪಕ್ಷದ ಸಭೆ ಇಂದು ನಡೆಯಲಿದ್ದು, ಈ ವೇಳೆ ನೂತನ ಮುಖ್ಯಮಂತ್ರಿ ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ.