ಚಂಡೀಗಢ(ಪಂಜಾಬ್): ಪಂಜಾಬ್ ಕಾಂಗ್ರೆಸ್ನಲ್ಲಿ ರಾಜಕೀಯ ಬಿಕ್ಕಟ್ಟು ಉದ್ಭವವಾಗುತ್ತಿದೆ. ಪ್ರತಿದಿನ ಒಂದಿಲ್ಲೊಂದು ಅಚ್ಚರಿ ರೀತಿಯ ಬೆಳವಣಿಗೆಗೆ ರಾಜ್ಯ ಸಾಕ್ಷಿಯಾಗುತ್ತಿದೆ. ಇದರ ನಡುವೆ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಚರಣ್ಜಿತ್ ಸಿಂಗ್ ಚನ್ನಿ ನೇತೃತ್ವದ ಸರ್ಕಾರ ಇಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ಸಿಎಂ ಚರಣ್ಜಿತ್ ಸಿಂಗ್ ಚನ್ನಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ 55 ಲಕ್ಷ ಜನರ (ಡೀಫಾಲ್ಟರ್) ಬಾಕಿಯಿರುವ ವಿದ್ಯುತ್ ಬಿಲ್ ಮನ್ನಾ ಮಾಡಿ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರಕ್ಕೆ ಬರೋಬ್ಬರಿ 1,200 ಕೋಟಿ ರೂ. ಹೆಚ್ಚಿನ ಹೊರೆ ಬೀಳಲಿದೆ ಎಂದು ಸಿಎಂ ತಿಳಿಸಿದ್ದಾರೆ.
ಇದನ್ನೂ ಓದಿ:ವಿದ್ಯುತ್, ನೀರು ಬಾಕಿ ಸಂಪೂರ್ಣ ಮನ್ನಾ ಮಾಡಿ ನಾನೇ 'ಆಮ್ ಆದ್ಮಿ' ಎಂದ ಚನ್ನಿ: ಅಮರೀಂದರ್ ಸಿಂಗ್ ಆಪ್ತ ಅಧಿಕಾರಿಗಳಿಗೂ ಗೇಟ್‌ಪಾಸ್!
ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯಿಂದ ತೆರವಾಗಿದ್ದ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗಿದ್ದ ಚರಣ್ ಜಿತ್ ಚನ್ನಿ, ಸೆಪ್ಟೆಂಬರ್ 20ರಂದು ನೂತನ ಸಿಎಂ ಆಗಿ ಪದಗ್ರಹಣ ಮಾಡಿದ್ದರು. ಈ ವೇಳೆ ಮಹತ್ವದ ಘೋಷಣೆ ಮಾಡಿದ್ದ ಅವರು, ವಿದ್ಯುತ್, ನೀರಿನ ಬಾಕಿ ಬಿಲ್ ಸಂಪೂರ್ಣ ಮನ್ನಾ ಮಾಡುವುದಾಗಿ ಹೇಳಿದ್ದರು. ಇದೀಗ ಬಾಕಿ ಇರುವ ವಿದ್ಯುತ್ ಬಿಲ್ ಮನ್ನಾ ಮಾಡಿ ಆದೇಶ ಹೊರಡಿಸಲಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಸಹಾಯವಾಗಲಿದೆ ಎಂದಿದ್ದಾರೆ.
ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು
ಕ್ಯಾ.ಅಮರೀಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಪಂಜಾಬ್‌ನಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಸಚಿವೆ ರಜಿಯಾ ಸುಲ್ತಾನಾ ಸೇರಿದಂತೆ ಅನೇಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಂಜಾಬ್‌ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.