ನವದೆಹಲಿ:ನ್ಯಾಷನಲ್ ಹೆರಾಲ್ಡ್ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸುತ್ತಿದೆ. ಕಾಂಗ್ರೆಸ್ ಅಧಿನಾಯಕಿಯನ್ನ ವಿಚಾರಣೆಗೊಳಪಡಿಸಿರುವುದನ್ನ ಖಂಡಿಸಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಅವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ನ 50 ಸಂಸದರು, ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಠಾಣೆಗೆ ಕರೆದೊಯ್ದಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದ್ದು, ಇಂದಿರಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಫೋಟೋ ಶೇರ್ ಮಾಡಿಕೊಂಡಿದೆ. ಜೊತೆಗೆ ಇತಿಹಾಸ ಪುನರಾವರ್ತನೆಯಾಗ್ತಿದೆ ಎಂದು ಹೇಳಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸದಂತೆ ಇಡಿಯಿಂದ ಸೋನಿಯಾ ಗಾಂಧಿ ಇಂದು ಎರಡನೇ ಸಲ ವಿಚಾರಣೆಗೊಳಪಟ್ಟಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ. ಮಹಾತ್ಮಾ ಗಾಂಧಿಯವರ ಸ್ಮಾರಕವಾದ ರಾಜ್ ಘಾಟ್‌ನಲ್ಲಿ ‘ಸತ್ಯಾಗ್ರಹ’ ನಡೆಸಲು ಅನುಮತಿ ನೀಡಬೇಕು ಎಂಬ ಅವರ ಬೇಡಿಕೆಯನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದರು. ಆ ಪ್ರದೇಶದಲ್ಲಿ ಸೆಕ್ಷನ್ 144ರ ಅಡಿ ನಿಷೇಧಾಜ್ಞೆಯನ್ನೂ ಜಾರಿಗೊಳಿಸಲಾಗಿತ್ತು.