ಮುಂಬೈ(ಮಹಾರಾಷ್ಟ್ರ):ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಹೋರಾಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಕೈಜೋಡಿಸಿ, ವಿರೋಧ ಪಕ್ಷಗಳನ್ನು ಒಟ್ಟುಗೂಡಿಸುವ ಕೆಲಸ ಮಾಡಬೇಕು ಎಂದು ಶಿವಸೇನೆ ಸಲಹೆ ನೀಡಿದೆ.
ಶಿವಸೇನೆಯ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಈ ಬಗ್ಗೆ ಉಲ್ಲೇಖಿಸಿದ್ದು, ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಮತ್ತು ಕೇಂದ್ರ ಸರ್ಕಾರ ನೀತಿಗಳ ವಿರುದ್ಧ ನಿರಂತರವಾಗಿ ಆಕ್ರಮಣ ಮಾಡುತ್ತಿರುತ್ತಾರೆ. ಆದರೆ ಅದು ಟ್ವಿಟರ್ಗೆ ಮಾತ್ರ ಸೀಮಿತವಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಮಹಾರಾಷ್ಟ್ರದ ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಅಧಿಕಾರ ಹಂಚಿಕೊಂಡಿರುವ ಶಿವಸೇನೆ ಪ್ರಧಾನಿ ನರೇಂದ್ರ ಮೋದಿಯವರ ಬಾಡಿ ಲಾಂಗ್ವೇಜ್ ಬದಲಾಗಿದೆ ಎಂದಿದ್ದು, ದೇಶದ ಪರಿಸ್ಥಿತಿ ಕೈಮೀರಿ ಹೋಗಿದೆ ಎಂದು ಮೋದಿಗೆ ತಿಳಿದಿದೆ. ವಿರೋಧ ಪಕ್ಷ ಬಲಿಷ್ಠವಾಗಿರದ ಕಾರಣದಿಂದ ತನಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಅವರು ಅರಿತಿದ್ದಾರೆ ಎಂದು ಹೇಳಿದೆ.