ನವದೆಹಲಿ:ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಹೀಗಾಗಿ ರಾಜಸ್ಥಾನದಲ್ಲಿನ ನಾಯಕತ್ವ ಬದಲಾವಣೆ ಸಂಬಂಧ ನಿರ್ಣಯ ಕೈಗೊಳ್ಳಲು ಜೈಪುರದಲ್ಲಿರುವ ಸಿಎಂ ಗೆಹ್ಲೋಟ್ ಅವರ ನಿವಾಸದಲ್ಲಿ ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆಯಲಿದೆ. ರಾಜಸ್ಥಾನದಲ್ಲಿ ನಾಯಕರ ಬದಲಾವಣೆ ನಿರ್ಧಾರದ ಬಗ್ಗೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿರ್ಣಯವನ್ನು ಕೂಡ ಇಲ್ಲಿ ಅಂಗೀಕರಿಸಲಾಗುತ್ತದೆ.
ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಸಿಎಂ ಅಶೋಕ್ ಗೆಹ್ಲೋಟ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಇಂದಿನ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ರಾಜಸ್ಥಾನದ ಉಸ್ತುವಾರಿ ಅಜಯ್ ಮಾಕನ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಶನಿವಾರ ಅಜಯ್ ಮಾಕನ್ ಅವರು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದರು.
ಜೈಪುರದಲ್ಲಿ ನಡೆಯಲಿರುವ ರಾಜಸ್ಥಾನ ಸಿಎಲ್ಪಿ ಸಭೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕನ್ ಅವರನ್ನು ವೀಕ್ಷಕರನ್ನಾಗಿ ಕಾಂಗ್ರೆಸ್ ಅಧ್ಯಕ್ಷರು ನೇಮಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಅಶೋಕ್ ಗೆಹ್ಲೋಟ್ ಮತ್ತು ಕೇಂದ್ರದ ಮಾಜಿ ಸಚಿವ ಶಶಿ ತರೂರ್ ನಡುವೆ ಪೈಪೋಟಿ ಏರ್ಪಟ್ಟಿದೆ. ಸೆಪ್ಟೆಂಬರ್ 30ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 19ರಂದು ನೂತನ ಕಾಂಗ್ರೆಸ್ ಅಧ್ಯಕ್ಷರು ಯಾರೆಂಬ ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು ಚುನಾವಣಾ ಅಧಿಕಾರಿಯಾಗಿದ್ದು, ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಾಮಪತ್ರ ಸ್ವೀಕಾರ ಕಾರ್ಯ ನಡೆಯಲಿದೆ.