ಕೋಟಾ (ರಾಜಸ್ಥಾನ): ಕೋಟಾದ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್‌ವೊಬ್ಬರ ಲೈಂಗಿಕ ಬೇಡಿಕೆ ಪ್ರಕರಣ ತಿರುವು ಪಡೆದುಕೊಳ್ಳುತ್ತಿದೆ. ಪ್ರೊ.ಗಿರೀಶ್ ಪರ್ಮಾರ್ ಎಂಬವರು ಪರೀಕ್ಷೆಯಲ್ಲಿ ಹೆಚ್ಚು ಅಂಕ ನೀಡುವುದಕ್ಕಾಗಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಆ ನಂತರ ಡಿ. 21 ರ ರಾತ್ರಿ ಆರೋಪಿ ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾಲಯ ಡಿಸೆಂಬರ್ 22 ರಂದು ಅವರನ್ನು ಸೇವೆಯಿಂದಲೂ ಅಮಾನತುಗೊಳಿಸಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 3 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಪ್ರಕರಣದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಈ ವಿಡಿಯೋಗಳಲ್ಲಿ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ವಿಡಿಯೋಗಳಿವೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಪ್ರಕರಣದಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿರುವ ಅರ್ಪಿತ್ ಅಗರ್ವಾಲ್ ಎಂಬಾತನನ್ನು ಡಿ. 25ರಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.