ಮುಂಬೈ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದೆ. ಜೂನ್ 15 ರ ಬುಧವಾರ ಪ್ರತಿಪಕ್ಷಗಳ ಸಭೆ ನಡೆದಿದ್ದು, ಈ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.
ಸರ್ವಸಮ್ಮತ ಅಭ್ಯರ್ಥಿಯನ್ನು ಅವಿರೋಧವಾಗಿ ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡುವ ಕುರಿತು ರಾಜನಾಥ್ ಸಿಂಗ್ ಮತ್ತು ಜೆಪಿ ನಡ್ಡಾಗೆ ಬಿಜೆಪಿ ಜವಾಬ್ದಾರಿ ವಹಿಸಿದೆ. ಈ ಹಿನ್ನೆಲೆ ರಾಜನಾಥ್ ಸಿಂಗ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಶರದ್ ಪವಾರ್ ಸೇರಿದಂತೆ ಇತರ ಪ್ರಮುಖ ವಿಪಕ್ಷ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ರಾಷ್ಟ್ರಪತಿ ಚುನಾವಣೆ ಸಂಬಂಧ ತೃಣಮೂಲ ಕಾಂಗ್ರೆಸ್ ನಾಯಕಿ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಜೂನ್ 15 ರ ಬುಧವಾರ ಪ್ರತಿಪಕ್ಷಗಳ ನಾಯಕರ ಸಭೆ ನಡೆಸಿದ್ದರು. ಈ ವೇಳೆ, ಎನ್ಡಿಎ ಪಕ್ಷದ ಅಭ್ಯರ್ಥಿಯನ್ನ ರಾಷ್ಟ್ರಪತಿಯಾಗಿ ಆಯ್ಕೆ ಮಾಡುವ ಕುರಿತು ಚರ್ಚೆ ನಡೆದಿರುವುದರಿಂದ ಶಿವಸೇನೆಯು ಎನ್ಡಿಎ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಒತ್ತಾಯಿಸಿದೆ ಎನ್ನಲಾಗಿದೆ.