ಕರ್ನೂಲ್ (ಆಂಧ್ರ ಪ್ರದೇಶ): ಟೆಂಪೋ-ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಘಟನೆಯಲ್ಲಿ ಒಂದು ಮಗು ಮತ್ತು 8 ಮಹಿಳೆಯರು ಸೇರಿ 14 ಜನ ಮೃತಪಟ್ಟಿದ್ದಾರೆ.
ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್‌ಗೆ ಹೋಗುವಾಗ ಅಪಘಾತ ಸಂಭವಿಸಿದೆ. ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ವೆಲ್ದುರ್ಥಿ ಬಳಿಯ ಮಾದಾಪುರಂನಲ್ಲಿ ದುರ್ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಯಾಸ್ಮಿನ್, ಅಸ್ಮಾ, ಕಾಸಿಮ್, ಮುಸ್ತಾಕ್ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಪುರಿ ಜಗನ್ನಾಥ ದೇಗುಲ ಫೋಟೋಗಳು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್: ಯುವತಿ ವಿರುದ್ಧ FIR
ಪ್ರಧಾನಿ ಮೋದಿ ಸಂತಾಪ: ಕರ್ನೂಲ್ ಜಿಲ್ಲೆಯ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತ ದುಃಖಕರವಾಗಿದೆ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ. ಮೃತರ ಕುಟುಂಬಕ್ಕೆ ಆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಸಂತಾಪ: ರಸ್ತೆ ಅಪಘಾತದಲ್ಲಿ ಸಂಭವಿಸಿದ ಪ್ರಾಣಹಾನಿ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪರಿಹಾರ ಕಾರ್ಯಗಳು ಮತ್ತು ಗಾಯಾಳುಗಳಿಗೆ ವೈದ್ಯಕೀಯ ನೆರವನ್ನು ತ್ವರಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.