ನವದೆಹಲಿ: ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ಆಧಾರವಾಗಿಟ್ಟುಕೊಂಡು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳನ್ನು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯ ವ್ಯಾಪ್ತಿಗೆ ತರುವಂತೆ ಸುಪ್ರೀಂ ಕೋರ್ಟ್ನಲ್ಲಿ ಕೇಳುವಂತಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ರಾಜಕೀಯ ಪಕ್ಷಗಳನ್ನು ಆರ್‌ಟಿಐ ಕಾನೂನಿನಡಿ ತರುವಂತೆ ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ವಿಷಯ ತಿಳಿಸಿದರು.
ರಾಜಕೀಯ ಪಕ್ಷಗಳನ್ನು ಆರ್‌ಟಿಐ ಅಡಿಯಲ್ಲಿ ತರಲು ರಿಟ್ ಆಫ್ ಮ್ಯಾಂಡಮಸ್ (ಅಧಿಕೃತ ಕರ್ತವ್ಯಗಳನ್ನು ಪೂರೈಸಲು ಸರ್ಕಾರಕ್ಕೆ ನ್ಯಾಯಾಂಗದ ಆದೇಶ) ಕೋರಲು ಸಿಐಸಿ ಆದೇಶ ಬಳಸುವಂತಿಲ್ಲ ಎಂದು ತುಷಾರ್ ಮೆಹ್ತಾ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದರು. ಏತನ್ಮಧ್ಯೆ, ಆರ್ಥಿಕ ಪಾರದರ್ಶಕತೆ ಖಚಿತಪಡಿಸಿಕೊಳ್ಳಲು ಆರ್‌ಟಿಐ ವ್ಯಾಪ್ತಿಗೆ ಒಳಪಡಲು ತಮ್ಮ ಪಕ್ಷಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪಕ್ಷವನ್ನು ಪ್ರತಿನಿಧಿಸುತ್ತಿರುವ ವಕೀಲ ಪಿ ವಿ ದಿನೇಶ್ ಹೇಳಿದರು.
ಪ್ರಕರಣದಲ್ಲಿ ಅರ್ಜಿದಾರನಾಗಿರುವ ಎನ್‌ಜಿಒ ಒಂದರ ಪರವಾಗಿ ಹಾಜರಾದ ವಕೀಲ ಪ್ರಶಾಂತ್ ಭೂಷಣ್, ರಾಜಕೀಯ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ತೆರಿಗೆ ವಿನಾಯಿತಿ ಮತ್ತು ಸರ್ಕಾರದಿಂದ ಭೂಮಿ ಮುಂತಾದ ಪ್ರಯೋಜನಗಳನ್ನು ಪಡೆಯುವ ರಾಜಕೀಯ ಪಕ್ಷಗಳನ್ನು ಆರ್‌ಟಿಐ ಅಡಿ ತರಲು ಸಿಐಸಿ 2013 ರಲ್ಲಿ ಆದೇಶವನ್ನು ಹೊರಡಿಸಿದೆ ಎಂದು ತಿಳಿಸಿದರು.