ನವದೆಹಲಿ:ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆ ವಿರುದ್ಧ ರೈತರು ಹೋರಾಟ ಆರಂಭಿಸಿ ನವೆಂಬರ್ 26ಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ಇದರ ಬೆನ್ನಲ್ಲೇ ನವೆಂಬರ್ 29ರಿಂದ ಆರಂಭಗೊಳ್ಳಲಿರುವ ಸಂಸತ್ ಚಳಿಗಾಲದ ಅಧಿವೇಶನದ ವೇಳೆ ದೊಡ್ಡ ಮಟ್ಟದ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧಾರ ಕೈಗೊಂಡಿತ್ತು. ಆದರೆ ಇಂದು ನಡೆದ ಸಭೆಯಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ಮುಂದೂಡಿಕೆ ಮಾಡಿದೆ.
ಸಿಂಘು ಗಡಿಯಲ್ಲಿ ಇಂದು ನಡೆದ ಸಂಯುಕ್ತ ಕಿಸಾನ್ ಮೋರ್ಚಾ ರೈತರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಡಿಸೆಂಬರ್ 4ರವರೆಗೆ ಕಾಲಾವಕಾಶ ನೀಡಿರುವ ಕಾರಣ ಟ್ರಾಕ್ಟರ್ ರ್‍ಯಾಲಿಯನ್ನು ಮುಂದೂಡಿದೆ.
ಕೇಂದ್ರ ಸರ್ಕಾರ ಈಗಾಗಲೇ ವಿವಾದಿತ ಮೂರು ಕೃಷಿ ಕಾಯ್ದೆ ಹಿಂಪಡೆದುಕೊಂಡಿದ್ದು, ಸೋಮವಾರದಿಂದ ಆರಂಭಗೊಳ್ಳಲಿರುವ ಸಂಸತ್ ಅಧಿವೇಶನದಲ್ಲಿ ಬಿಲ್ ಮಂಡಿಸುವ ಸಾಧ್ಯತೆ ಇದೆ. ಆದರೆ ಕನಿಷ್ಠ ಬೆಂಬಲ ಬೆಲೆ ವಿಚಾರವಾಗಿ ಕೇಂದ್ರ ಸರ್ಕಾರ ಇಲ್ಲಿಯವರೆಗೆ ರೈತರೊಂದಿಗೆ ಯಾವುದೇ ರೀತಿಯ ಮಾತುಕತೆ ನಡೆಸಿಲ್ಲ. ಇದೇ ಕಾರಣಕ್ಕಾಗಿ ನವೆಂಬರ್ 29ರಂದು ಕಿಸಾನ್ ಯೂನಿಯನ್ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲು ಮುಂದಾಗಿತ್ತು.