ನವದೆಹಲಿ:ಕಳೆದ ಕೆಲ ದಿನಗಳ ಹಿಂದೆ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎನ್ಸಿಪಿ ಹಾಗೂ ಶಿವಸೇನೆಯ ಪ್ರಮುಖ ಮುಖಂಡರ ಜೊತೆ ಮಹತ್ವದ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ್ದ ದೀದಿ, ಯುಪಿಎ ಎಂಬುದು ಈಗ ಉಳಿದಿಲ್ಲ ಎಂಬ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ಗೆ ಟಾಂಗ್ ನೀಡಿದ್ದರು. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಹಾಗೂ ಸಂಜಯ್ ರಾವತ್ ಭೇಟಿ ಮಾಡ್ತಿರುವುದು ಕುತೂಹಲ ಮೂಡಿಸಿದೆ.
ಮಹಾರಾಷ್ಟ್ರದಲ್ಲಿ ಈಗಾಗಲೇ ಎನ್ಸಿಪಿ+ಕಾಂಗ್ರೆಸ್+ಶಿವಸೇನೆ ಮೈತ್ರಿ ಸರ್ಕಾರವಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿವಸೇನೆ ಸಂಸದ ಸಂಜಯ್ ರಾವತ್ ಹಾಗೂ ರಾಹುಲ್ ಗಾಂಧಿ ನಡುವೆ ಮಹತ್ವದ ಮಾತುಕತೆ ನಡೆಯಲಿದೆ. ಮುಂದಿನ ವರ್ಷ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವ ಬಗ್ಗೆ ಇಂದಿನ ಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ದಟ್ಟವಾಗಿದೆ. ಜೊತೆಗೆ ಯುಪಿಎ ವಿಚಾರವಾಗಿ ಮಾತುಕತೆ ನಡೆಯಬಹುದು ಎನ್ನಲಾಗ್ತಿದೆ.