ನವದೆಹಲಿ:ಅವ್ಯವಹಾರ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನೀಡಿದ್ದ ಮಧ್ಯಂತರ ರಿಲೀಫ್ ಅನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ. ಇದಕ್ಕೂ ಮುನ್ನ ಬಿಎಸ್ವೈ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿತ್ತು. ಇದೀಗ ತಡೆಯಾಜ್ಞೆಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ಕೋರ್ಟ್ ಇಂದು ತೀರ್ಪು ನೀಡಿದೆ.
2 ಕೋಟಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಅಸ್ತು ಎಂದಿದ್ದ ಕರ್ನಾಟಕ ಹೈಕೋರ್ಟ್ನ ತೀರ್ಪು ಪ್ರಶ್ನಿಸಿ ಮಾಜಿ ಸಿಎಂ ಬಿಎಸ್ವೈ ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದರು. ಈ ಅರ್ಜಿ ವಿಚಾರಣೆ ನಡೆಸಿ ಪ್ರಕರಣದ ತನಿಖೆಗೆ ತಡೆ ನೀಡಿ, ಪ್ರತಿವಾದಿಗಳಿಗೆ ಈ ಮೊದಲು ಸುಪ್ರೀಂ ನೋಟಿಸ್ ಜಾರಿ ಮಾಡಿತ್ತು. ಇಂದು ಕೂಡ ವಿಚಾರಣೆ ನಡೆಸದ ಕೋರ್ಟ್, ತಡೆಯಾಜ್ಞೆಯನ್ನು ವಿಸ್ತರಿಸಿ ಆದೇಶಿಸಿದೆ.
ಇತ್ತೀಚೆಗಷ್ಟೇ ಸುಪ್ರೀಂಕೋರ್ಟ್ನಲ್ಲಿ ಬಿಎಸ್ವೈ ಹಾಗೂ ಅವರ ಕುಟುಂಬದ ವಿರುದ್ಧ ಪ್ರಕರಣದ ವಿಚಾರಣೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸುವಂತೆ ಲೋಕಾಯುಕ್ತರಿಗೆ ಸೂಚನೆ ನೀಡಿತ್ತು. ಕೆಳ ನ್ಯಾಯಾಲಯದ ಆದೇಶದಂತೆ ಲೋಕಾಯುಕ್ತದಲ್ಲಿ ಎಫ್ಎಆರ್ ಕೂಡಾ ದಾಖಲಾಗಿತ್ತು.
ಈ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಹೈಕೋರ್ಟ್ ತೀರ್ಪಿಗೆ ನೀಡಿದ್ದ ತಡೆಯನ್ನು ವಿಸ್ತರಿಸಿದೆ.
ಪ್ರಕರಣದ ಹಿನ್ನೆಲೆ:ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಆದರೆ, ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಟಿ.ಜೆ. ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.
ದೂರನ್ನು ಮರುಪರಿಶೀಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿತ್ತು. ಬಳಿಕ ತನಿಖೆ ನಡೆಸಿ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ತನಿಖೆಗೆ ಮುಂದಾಗಿರುವ ಲೋಕಾಯುಕ್ತ ಪೊಲೀಸರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ಬಿ.ವೈ ವಿಜಯೇಂದ್ರ ಹಾಗೂ ಮತ್ತಿತರರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು. ನಮ್ಮ ಪರವಾದ ವಕೀಲರು ಸುಪ್ರೀಂಕೋರ್ಟ್ನಲ್ಲಿ ವಾದ ಮಂಡಿಸುವುದಕ್ಕಾಗಿ ಸಿದ್ಧರಾಗುತ್ತಿದ್ದಾರೆ ಎಂದು ಟಿ.ಜೆ. ಅಬ್ರಾಹಂ 'ಈಟಿವಿ ಭಾರತ'ಕ್ಕೆ ವಿವರಿಸಿದ್ದರು. ಈಗ ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಸುಪ್ರೀಂ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.