ನವದೆಹಲಿ:370 ಮತ್ತು 35 ಎ ವಿಧಿ ರದ್ದು ಮಾಡಿದ್ದನ್ನು ಮಾನ್ಯಗೊಳಿಸಿ ಸಾಂವಿಧಾನಿಕ ಎಂದು ಘೋಷಿಸಲು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದೆ. ಈ ಮನವಿಯನ್ನು ತಪ್ಪಾಗಿ ಸಲ್ಲಿಸಲಾಗಿದೆ ಎಂದು ಇದೇ ವೇಳೆ ನ್ಯಾಯಪೀಠ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠ ಈ ಅರ್ಜಿಯನ್ನು ವಜಾ ಮಾಡಿದ್ದಾರೆ. 370 ಮತ್ತು 35 ಎ ವಿಧಿ ರದ್ದಿನ ವಿರುದ್ಧ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಯುತ್ತಿರುವ ಹೊತ್ತಲ್ಲೇ ಮಾನ್ಯ ಮಾಡಲು ಕೋರಿರುವುದು ಸರಿಯಲ್ಲ. ಹೀಗಾಗಿ ಅರ್ಜಿಯನ್ನು ತಿರಸ್ಕರಿಸಲಾಗುವುದು ಎಂದು ಪೀಠ ಹೇಳಿದೆ.
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿ ಮತ್ತು ಅಲ್ಲಿನ ಜನರ ಕಾಯಂ ನಿವಾಸಕ್ಕೆ ಭದ್ರತೆ ಒದಗಿಸುವ 35ಎ ವಿಧಿಯನ್ನು ರಾಷ್ಟ್ರಪತಿಗಳು ರದ್ದು ಮಾಡಿ ಆದೇಶಿಸಿದ್ದಾರೆ. ಇದರ ವಿರುದ್ಧ ಈಗಾಗಲೇ ಆಕ್ಷೇಪಣೆಗಳು ಬಂದಿದ್ದು, ಅದರ ಅರ್ಜಿಗಳು ವಿಚಾರಣೆ ಹಂತದಲ್ಲಿವೆ. ರದ್ದನ್ನು ಮಾನ್ಯ ಮಾಡುವ ಘೋಷಣೆ ಹೊರಡಿಸಲು ಸಾಧ್ಯವಿಲ್ಲ. ಅದರ ಸಾಂವಿಧಾನಿಕ ಸಿಂಧುತ್ವದ ಪ್ರಶ್ನೆಯು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.
ಸಾಂವಿಧಾನಿಕ ಪೀಠದ ಮುಂದೆ ವಿಚಾರಣೆ:ಸಿಜೆಐ ಚಂದ್ರಚೂಡ್ ನೇತೃತ್ವದ 5 ನ್ಯಾಯಾಧೀಶರ ಸಂವಿಧಾನ ಪೀಠವು ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ 2019 ರ ರಾಷ್ಟ್ರಪತಿ ಆದೇಶದ ವಿರುದ್ಧ ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳ ವಿಚಾರಣೆ ನಡೆಯುತ್ತಿದೆ. ಸಾಂವಿಧಾನಿಕ ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್. ಗವಾಯಿ ಮತ್ತು ಸೂರ್ಯಕಾಂತ್ ಅವರು ಇದ್ದು, ಸೋಮವಾರ ಮತ್ತು ಶುಕ್ರವಾರ ಹೊರತುಪಡಿಸಿ ಆಗಸ್ಟ್ 2 ರಿಂದ ನಿರಂತರವಾಗಿ ವಾದ- ಪ್ರತಿವಾದ ಆಲಿಸುತ್ತಿದ್ದಾರೆ.