ನವದೆಹಲಿ :NEET-PG-22 ಪರೀಕ್ಷೆಯನ್ನು ಮುಂದೂಡುವಂತೆ ವೈದ್ಯರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರಿದ್ದ ಪೀಠವು ಪರೀಕ್ಷೆಯನ್ನು ಮುಂದೂಡುವುದರಿಂದ ವೈದ್ಯರ ಅಲಭ್ಯತೆಯಾಗಿ ರೋಗಿಗಳ ಆರೈಕೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅದಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಅವರ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದೆ.
ಒಂದು ವರ್ಗದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡುವುದನ್ನು ಬಯಸಿದರೆ, ಇನ್ನೊಂದು ವರ್ಗದಲ್ಲಿರುವ ಎರಡು ಲಕ್ಷದ ಆರು ಸಾವಿರ ಅಭ್ಯರ್ಥಿಗಳು ಈಗಾಗಲೇ ಪರೀಕ್ಷೆಗೆ ತಯಾರಾಗಿದ್ದಾರೆ. ಅವರ ಮೇಲೆ ಪ್ರಭಾವ ಬೀರುತ್ತದೆ ಎಂದು ಪೀಠ ಹೇಳಿದೆ. ಸಾಂಕ್ರಾಮಿಕ ರೋಗದಿಂದಾಗಿ ಪರೀಕ್ಷೆ ನಡೆಸಲು ಸಾಧ್ಯವಾಗದೇ ಈಗ ಸರಿಯಾದ ಸಮಯಕ್ಕೆ ಪರೀಕ್ಷೆ ನಡೆಯುವಂತೆ ವೇಳಾಪಟ್ಟಿಯನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ.