ನವದೆಹಲಿ: ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಕರ ನೇಮಕಾತಿ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳಿಂದ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರನ್ನು ಸುಪ್ರೀಂ ಕೋರ್ಟ್ ತೆಗೆದುಹಾಕಿದೆ. ಪ್ರಕರಣದಲ್ಲಿ ಬಾಕಿ ಉಳಿದಿರುವ ವಿಚಾರಣೆಯನ್ನು ಮತ್ತೊಬ್ಬ ನ್ಯಾಯಮೂರ್ತಿಗೆ ಮರು ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಾಮೂರ್ತಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಎಸ್ ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು ಹೊಸ ನ್ಯಾಯಾಮೂರ್ತಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ಪರಿಗಣಿಸಲು ಮುಕ್ತವಾಗಿರುತ್ತಾರೆ ಎಂದು ಹೇಳಿದೆ.
ಅಭಿಜಿತ್ ಗಂಗೋಪಾಧ್ಯಾಯ ಅವರ ನಿಷ್ಪಕ್ಷಪಾತತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಬ್ಯಾನರ್ಜಿ:ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಪ್ರಶ್ನಿಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಗೆ ನಿರ್ದೇಶನ ನೀಡಿದ ಕಲ್ಕತ್ತಾ ಹೈಕೋರ್ಟ್‌ನ ಇತ್ತೀಚಿನ ಆದೇಶದ ವಿರುದ್ಧ ಮೇಲ್ಮನವಿ ಅರ್ಜಿ ಸಲ್ಲಿಸಿದ ನಂತರ ಈ ತೀರ್ಪು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಬ್ಯಾನರ್ಜಿ ಬಗ್ಗೆ ಕೆಲವು ಟೀಕೆಗಳನ್ನು ಮಾಡಿದ್ದ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರ ನಿಷ್ಪಕ್ಷಪಾತತೆ ಬಗ್ಗೆ ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದರು.