ನವದೆಹಲಿ: 2002ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಹಾಗೂ ಸಂತ್ರಸ್ತೆಯ14 ಜನ ಕುಟುಂಬ ಸದಸ್ಯರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಇಂದು ಸಮ್ಮತಿಸಿದೆ.
ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಗುಜರಾತ್ ಸರ್ಕಾರವು ಕ್ಷಮಾಪಣೆ ಅನ್ವಯ ಎಲ್ಲ ಅಪರಾಧಿಗಳನ್ನು ಆಗಸ್ಟ್ 15ರಂದು ಬಿಡುಗಡೆಗೊಳಿಸಿತ್ತು. ಸರ್ಕಾರದ ಈ ನಡೆ ಬಗ್ಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿ ವಿರೋಧಕ್ಕೂ ಕಾರಣವಾಗಿದೆ. ಅಲ್ಲದೇ, ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ನ್ಯಾಯವಾದಿ ಅಪರ್ಣಾ ಭಟ್ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್, ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಸೇರಿದಂತೆ ಸುಪ್ರೀಂಕೋರ್ಟ್ಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಈ ಅರ್ಜಿ ವಿಚಾರಣೆಯನ್ನು ತುರ್ತಾಗಿ ಕೈಗೆತ್ತಿಕೊಳ್ಳಬೇಕೆಂದು ನ್ಯಾಯವಾದಿ ಅಪರ್ಣಾ ಭಟ್ ಪ್ರಸ್ತಾಪಿಸಿದರು. ಇದಕ್ಕೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರ ನೇತೃತ್ವದ ಪೀಠವು ಸಮ್ಮತಿಸಿ ಅರ್ಜಿ ವಿಚಾರಣೆಗೆ ಒಪ್ಪಿಕೊಂಡಿದೆ.
ಇದಕ್ಕೂ ಮುನ್ನ ಈ ಪ್ರಕರಣದಲ್ಲಿ ನಿರ್ಧಾರ ತೆಗೆದುಕೊಳ್ಳಲು ಸುಪ್ರೀಂಕೋರ್ಟ್ ಸರ್ಕಾರದ ವಿವೇಚನೆಗೆ ನೀಡಿತ್ತು. ಸರ್ಕಾರವು ಅಪರಾಧಿಗಳಿಗೆ ಕ್ಷಮಾಪಣೆ ನೀಡಿರುವುದನ್ನು ನಾವು ಪ್ರಶ್ನಿಸುತ್ತಿದ್ದೇವೆಯೇ ಹೊರತು ಸುಪ್ರೀಂಕೋರ್ಟ್ ಆದೇಶವನ್ನಲ್ಲ. ಯಾವ ತತ್ವಗಳ ಆಧಾರದ ಮೇಲೆ ಕ್ಷಮಾಪಣೆ ನೀಡಲಾಗಿದೆ ಎಂದು ಪ್ರಶ್ನಿಸುತ್ತಿದ್ದೇವೆ ಎಂದು ಕಪಿಲ್ ಸಿಬಲ್ ಹೇಳಿದರು.