ಪ್ರಯಾಗರಾಜ್ (ಉತ್ತರ ಪ್ರದೇಶ):15 ವರ್ಷ ಅಥವಾ 15 ವರ್ಷ ವಯಸ್ಸಿಗಿಂತ ಮೇಲ್ಪಟ್ಟ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರವಲ್ಲ ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆಯ 375ನೇ ಸೆಕ್ಷನ್ಗೆ ಸಂಬಂಧಿಸಿದಂತೆ ಈ ತೀರ್ಪು ಹೊರಬಿದ್ದಿದೆ.
ಮೊರದಾಬಾದ್ನ ಖುಷಾಬೆ ಅಲಿ ಎಂಬಾತನ ಜಾಮೀನು ಅರ್ಜಿ ವಿಚಾರಣೆ ವೇಳೆ ಅಲಹಾಬಾದ್ ಹೈಕೋರ್ಟ್ನ ನ್ಯಾಯಾಧೀಶ ಮೊಹಮದ್ ಅಸ್ಲಂ ಈ ರೀತಿಯ ತೀರ್ಪು ನೀಡಿದರು. ಅಪ್ರಾಪ್ತ ಪತ್ನಿಗೆ ವರದಕ್ಷಿಣೆ ಕಿರುಕುಳ ಮತ್ತು ನೈಸರ್ಗಿಕವಲ್ಲದ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಆರೋಪದಲ್ಲಿ ಖುಷಾಬೆ ಅಲಿ ವಿರುದ್ಧ ದೂರು ದಾಖಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ಆರೋಪಿಗೆ ಜಾಮೀನು ನೀಡಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375 ಪ್ರಕಾರ ಒಬ್ಬ ವ್ಯಕ್ತಿ ತನ್ನ ಪತ್ನಿ 15 ವರ್ಷ ಅಥವಾ 15 ವರ್ಷಕ್ಕಿಂತ ಮೇಲ್ಪಟ್ಟವಳಾಗಿದ್ದರೆ, ಆಕೆಯ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದು ಅತ್ಯಾಚಾರವಲ್ಲ ಎಂದು ಅಭಿಪ್ರಾಯಪಟ್ಟಿತು.
1860ರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375, 15 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ತನ್ನ ಪತ್ನಿಯೊಂದಿಗೆ ಲೈಂಗಿಕ ಸಂಭೋಗವನ್ನು ಹೊರತುಪಡಿಸಿ, ಉಳಿದ ಎಲ್ಲಾ ಮಹಿಳೆಯರೊಂದಿಗೆ ಒಪ್ಪಿತವಲ್ಲದ ಲೈಂಗಿಕ ಕ್ರಿಯೆಯನ್ನು ಅತ್ಯಾಚಾರ ಎಂದು ಪರಿಗಣಿಸುತ್ತದೆ.