ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಪಿತ್ತಕೋಶದಲ್ಲಿದ್ದ ಕಲ್ಲು ಯಶಸ್ವಿಯಾಗಿ ತೆಗೆದುಹಾಕಲಾಗಿದ್ದು, ಅವರ ಆರೋಗ್ಯ ಉತ್ತಮವಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಮಾಹಿತಿ ನೀಡಿದ್ದಾರೆ.
ಶಸ್ತ್ರಚಿಕಿತ್ಸೆ ನಂತರ ಶರದ್ ಪವಾರ್ ಆರೋಗ್ಯ ಉತ್ತಮವಾಗಿದೆ: ರಾಜೇಶ್ ಟೊಪೆ ಸ್ಪಷ್ಟನೆ
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಪಿತ್ತಕೋಶದಲ್ಲಿ ಸಮಸ್ಯೆ ಕಂಡು ಬಂದ ಹಿನ್ನೆಲೆ ನಿನ್ನೆ ಶಸ್ತ್ರಚಿಕಿತ್ಸೆ ನಡೆಸಿ ಕಿಬ್ಬೊಟ್ಟೆಯಲ್ಲಿದ್ದ ಕಲ್ಲುಗಳನ್ನು ತೆಗೆದುಹಾಕಲಾಗಿದ್ದು, ಅವರ ಆರೋಗ್ಯ ಉತ್ತಮವಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಮಾಹಿತಿ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಸಂಜೆಯಿಂದ ಶರದ್ ಪವಾರ್ ಅವರ ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದ್ದು, ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು. ಅವರ ಪಿತ್ತಕೋಶದಲ್ಲಿ ಕಲ್ಲುಗಳು ಇರುವುದನ್ನು ವೈದ್ಯರು ಪತ್ತೆಹಚ್ಚಿದ್ದರು. ಹಾಗಾಗಿ ನಿನ್ನೆ ಎಂಡೋಸ್ಕೋಪ್ ಮತ್ತು ಶಸ್ತ್ರಚಿಕಿತ್ಸೆ ನಡೆಸಿ ಕಲ್ಲನ್ನು ಹೊರ ತೆಗೆಯಲಾಗಿದ್ದು, ಈಗ ಶರದ್ ಪವಾರ್ ಆರೋಗ್ಯ ಸ್ಥಿರವಾಗಿದೆ ಎಂದು ಟೋಪೆ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆ ವೈದ್ಯ ಅಮಿತ್, ಶರದ್ ಪವಾರ್ ಅವರಿಗೆ ಕೆಲವು ಪರೀಕ್ಷೆಗಳನ್ನು ನಡೆಸಿದ ನಂತರ, ಪಿತ್ತಕೋಶದಲ್ಲಿ ಕಲ್ಲುಗಳು ಇರುವುದು ಪತ್ತೆಯಾಯಿತು. ಈ ಹಿನ್ನೆಲೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಕಲ್ಲನ್ನು ಯಶಸ್ವಿಯಾಗಿ ತೆಗೆದುಹಾಕಲಾಗಿದೆ. ಅವರ ಸ್ಥಿತಿ ಉತ್ತಮವಾಗಿದ್ದು, ಅಬ್ಸರ್ವೇಷನ್ನಲ್ಲಿ ಇಡಲಾಗಿದೆ ಎಂದು ಮಾಹಿತಿ ನೀಡಿದರು.