ನವದೆಹಲಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕರ್ನಾಟಕ ರಾಜ್ಯದ ನೂತನ ಸಿಎಂ ಆಯ್ಕೆಯ ಕಸರತ್ತು ಅಂತಿಮ ಹಂತಕ್ಕೆ ಬಂದಿದೆ. ಸಿದ್ದರಾಮಯ್ಯ ಮತ್ತೊಮ್ಮೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಮೇ 20 ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಶಾಸಕಂಗ ಪಕ್ಷದ ನಾಯಕನ ಆಯ್ಕೆ ಮಾಡುವ ಸಂಬಂಧ ಗುರುವಾರ (ಇಂದು) ಸಂಜೆ 7 ಗಂಟೆಗೆ ಇಂದಿರಾ ಗಾಂಧಿ ಭವನದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಅಧಿಕೃತವಾಗಿ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ಶಾಸಕಾಂಗ ಪಕ್ಷ ನಾಯಕನ ಆಯ್ಕೆ ಜವಾಬ್ದಾರಿಯನ್ನು ಮೊನ್ನೆ ನಡೆದ ಶಾಸಕರ ಸಭೆಯಲ್ಲಿ ಹೈಕಮಾಂಡ್ಗೆ ನೀಡುವ ನಿರ್ಣಯ ತಗೆದುಕೊಳ್ಳಲಾಗಿತ್ತು. ಅದರಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಜೊತೆ ಸುದೀರ್ಘ ಚರ್ಚೆ ನಡೆಸಿ ಕೈಗೊಂಡ ತೀರ್ಮಾನವನ್ನು ಸಂಜೆ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಕಟಿಸಲಾಗುತ್ತದೆ.
ಸಭೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಪ್ರತಿನಿಧಿಗಳು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾದ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಿದ ಬಳಿಕ ಶುಕ್ರವಾರದಂದು ನೂತನ ಮುಖ್ಯಮಂತ್ರಿಯ ಹಾಗು ಸಚಿವರುಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಹೇಳಲಾಗಿದೆ.
ನಿನ್ನೆ (ಬುಧವಾರ) ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, "ಮುಂದಿನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಇಂದು/ ನಾಳೆ ನಿರ್ಧಾರ ಪ್ರಕಟಿಸಲಾಗುವುದು. ಮುಂದಿನ 72 ಗಂಟೆಯೊಳಗೆ ಹೊಸ ಸಚಿವ ಸಂಪುಟ ಅಸ್ತಿತ್ವಕ್ಕೆ ಬರಲಿದೆ" ಎಂದು ಹೇಳಿದ್ದರು.