ನವದೆಹಲಿ:ಯುಪಿಎ ಅಧ್ಯಕ್ಷೆ, ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ಸೋನಿಯಾ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರ ನಿಗಾದಲ್ಲಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಹಿರಿಯ ರಾಜಕಾರಣಿ ಸೋನಿಯಾ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಸರ್ ಗಂಗಾರಾಮ್ ಆಸ್ಪತ್ರೆಯ ಟ್ರಸ್ಟ್ ಸೊಸೈಟಿಯ ಅಧ್ಯಕ್ಷರಾದ ಡಾ.ಡಿ.ಎಸ್.ರಾಣಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ''ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮಾರ್ಚ್ 2ರಂದು ಆಸ್ಪತ್ರೆಗೆ ದಾಖಿಸಲಾಗಿದೆ. ಚೆಸ್ಟ್ ಮೆಡಿಸಿನ್ ವಿಭಾಗದ ಹಿರಿಯ ವೈದ್ಯ ಡಾ.ಅರೂಪ್ ಬಸು ಮತ್ತು ಅವರ ತಂಡವು ಚಿಕಿತ್ಸೆ ನೀಡುತ್ತಿದೆ. ಆರೋಗ್ಯಕ್ಕೆ ಸಂಬಂಧಿಸಿಂದ ತಪಾಸಣೆ ನಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ'' ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಜ್ವರದಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ನಾನು ಹಾರೈಸುತ್ತೇನೆ ಎಂದು ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಛತ್ತೀಸ್ಗಢದ ರಾಯಪುರದಲ್ಲಿ ಫೆ.24ರಿಂದ 26ರವರೆಗೆ ನಡೆದ ಕಾಂಗ್ರೆಸ್ ಮಹಾ ಅಧಿವೇಶನದಲ್ಲಿ ಸೋನಿಯಾ ಗಾಂಧಿ ಪಾಲ್ಗೊಂಡಿದ್ದರು. ಪಕ್ಷದ ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಸೋನಿಯಾ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಈ ವರ್ಷದ ಮೂರು ತಿಂಗಳ ಅವಧಿಯಲ್ಲಿ ಕಾಂಗ್ರೆಸ್ ನಾಯಕಿ ಎರಡನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.