ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಸೋನಿಯಾ ಗಾಂಧಿ ಇಂದು ಸತತ ಮೂರು ಗಂಟೆಗಳ ಕಾಲ ವಿಚಾರಣೆಗೊಳಲ್ಪಟ್ಟಿದ್ದು, ಕೆಲ ಹೊತ್ತಿನ ಮುಂಚೆ ಅವರು ನಿವಾಸಕ್ಕೆ ತೆರಳಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಇ.ಡಿ ಕಚೇರಿಯಿಂದ ಸೋನಿಯಾ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಹೀಗಾಗಿ, ಇಂದು ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಅಧಿಕಾರಿಗಳು ಬರೋಬ್ಬರಿ ಮೂರು ಗಂಟೆಗಳ ಕಾಲ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿರಿ:ನ್ಯಾಷನಲ್ ಹೆರಾಲ್ಡ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಸೋನಿಯಾಗೆ ED ನೋಟಿಸ್
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪುತ್ರ ರಾಹುಲ್ ಗಾಂಧಿ ಸಹ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸಿದ್ದಾರೆ. ಕೋವಿಡ್ ಕಾರಣದಿಂದಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸೋನಿಯಾ ಗಾಂಧಿ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಇದೀಗ ವಿಚಾರಣೆ ಎದುರಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಬಿಗಿ ಭದ್ರತೆಯಲ್ಲಿ ಸೋನಿಯಾ ಗಾಂಧಿ ಇಡಿ ಕಚೇರಿಗೆ ಆಗಮಿಸಿದ್ದು, ಅವರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಸಾಥ್ ನೀಡಿದರು.
ದೇಶಾದ್ಯಂತ ಬೃಹತ್ ಪ್ರತಿಭಟನೆ:ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನ ವಿಚಾರಣೆಗೊಳಪಡಿಸಿರುವ ನಿರ್ಧಾರ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ಈ ವೇಳೆ, ಕೆಲವೆಡೆ ರೈಲು ಬಂದ್ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಲಾಗಿದೆ. ಪ್ರಮುಖವಾಗಿ ದೆಹಲಿಯಲ್ಲಿ ದೊಡ್ಡಮಟ್ಟದ ಪ್ರತಿಭಟನೆ ನಡೆಯಿತು. ತೆಲಂಗಾಣದಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಪಕ್ಷದ ಮುಖಂಡರಾದ ಪಿ. ಚಿದಂಬರಂ, ಅಜೇಯ್ ಮಾಖೇನ್ ಸೇರಿದಂತೆ ಅನೇಕರು ಬೀದಿಗಿಳಿದಿದ್ದರು.
ಜೂನ್ 13 ರಿಂದ ಜೂನ್ 21ರ ನಡುವೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಐದು ಬಾರಿ ಪ್ರಶ್ನಿಸಿದೆ. 2012ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಭಾರಿ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ಸುಬ್ರಮಣ್ಯನ್ ಸ್ವಾಮಿ ದೂರು ದಾಖಲಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಲ್ಲಿಕಾರ್ಜುನ್ ಖರ್ಗೆ ಸಹ ವಿಚಾರಣೆಗೊಳಪಟ್ಟಿದ್ದಾರೆ.