ನವದೆಹಲಿ:ಭದ್ರತಾ ಲೋಪದಿಂದಾಗಿ ಪಂಜಾಬ್ನ ಫಿರೋಜ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್‍ಯಾಲಿ ರದ್ದಾಗಿ ಭಾರೀ ವಿವಾದ ಉಂಟಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರಿಂದ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಮತ್ತು ಘಟನೆ ಕುರಿತು ವಿವರ ಕೇಳಿದ್ದಾರೆ.
ಅಲ್ಲದೇ, ಭದ್ರತಾ ವಿಷಯಗಳಿಗೆ ಮೊದಲ ಆದ್ಯತೆ ನೀಡಿ ಎಂದು ಸರ್ಕಾರಕ್ಕೆ ಸಲಹೆಯನ್ನು ನೀಡಿದ್ದಾರೆ. ಮೂಲಗಳ ಪ್ರಕಾರ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಅವರು ಸೋನಿಯಾ ಗಾಂಧಿ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಪ್ರಧಾನಿಗಳ ಭದ್ರತಾ ವೈಫಲ್ಯದ ಬಗ್ಗೆ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶ ಮೆಹ್ತಾವ್ ಸಿಂಗ್ ಗಿಲ್, ಗೃಹ ವ್ಯವಹಾರಗಳ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಅನುರಾಗ್ ವರ್ಮಾ ಅವರನ್ನೊಳಗೊಂಡ ಸಮಿತಿಯನ್ನು ರಚನೆ ಮಾಡಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.