ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8 ರಂದು ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತು ಅವರ ಪುತ್ರ, ಸಂಸದ ರಾಹುಲ್ ಗಾಂಧಿಗೆ ಇಂದು ಹಾಜರಾಘುವಂತೆ ಸಮನ್ಸ್ ಜಾರಿ ಮಾಡಿತ್ತು. ಇದರ ಬೆನ್ನಲ್ಲೇ ಸೋನಿಯಾ ಗಾಂಧಿಗೆ ಕೋವಿಡ್ ಕಾಣಿಸಿಕೊಂಡಿದ್ದು, ಸ್ವಯಂ ಪ್ರೇರಿತರಾಗಿ ಕ್ವಾರಂಟೈನ್ಗೊಳಗಾಗಿದ್ದಾರೆಂದು ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಅವರ ಆರೋಗ್ಯದಲ್ಲಿ ಸೌಮ್ಯ ಸ್ವಭಾವದ ಜ್ವರ ಹಾಗೂ ಕೋವಿಡ್ ರೋಗಲಕ್ಷಣ ಕಂಡು ಬಂದಿದೆ ಎಂದು ಸುರ್ಜೇವಾಲಾ ತಿಳಿಸಿದ್ದಾರೆ. ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಪ್ರತ್ಯೇಕವಾಗಿ ಉಳಿದುಕೊಂಡಿರುವ ಅವರು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ ಗಾಂಧಿ, ಪುತ್ರ ರಾಹುಲ್ಗೆ ಸಮನ್ಸ್
2015ರಲ್ಲಿ ತನಿಖಾ ಸಂಸ್ಥೆಯಿಂದ ಮುಕ್ತಾಯವಾಗಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇದೀಗ ಜಾರಿ ನಿರ್ದೇಶನಾಲಯ ನಿನ್ನೆ ಸಮನ್ಸ್ ನೀಡಿದೆ. ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ಕಾಂಗ್ರೆಸ್ ನಾಯಕ ಅಗತ್ಯವಿದ್ದರೆ ಸೋನಿಯಾ ಗಾಂಧಿ ಹಾಜರಾಗುತ್ತಾರೆ. ಆದರೆ, ರಾಹುಲ್ ಗಾಂಧಿ ವಿದೇಶದಲ್ಲಿರುವ ಕಾರಣ ಅವರಿಗೆ ಸಮಯವಕಾಶ ನೀಡುವಂತೆ ಮನವಿ ಮಾಡುವುದಾಗಿ ತಿಳಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೂ ಸಮನ್ಸ್ ಜಾರಿ ಮಾಡಲಾಗಿತ್ತು. 2012ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಭಾರಿ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ಸುಬ್ರಮಣ್ಯನ್ ಸ್ವಾಮಿ ದೂರು ದಾಖಲಿಸಿದ್ದರು.