ಮೀರತ್(ಉತ್ತರಪ್ರದೇಶ) : ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮೈತ್ರಿ ಮಾಡಿಕೊಂಡಿವೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಘೋಷಿಸಿದ್ದಾರೆ. ಅಲ್ಲದೆ ಎರಡೂ ಪಕ್ಷಗಳ ಮುಖಂಡರು ಮೀರತ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಒಟ್ಟಿಗೆ ವೇದಿಕೆ ಹಂಚಿಕೊಂಡರು.
UP Election 2022: ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸರ್ಕಾರವು ರೈತರಿಗೆ ಎಲ್ಲಾ ರೀತಿಯ ಹಕ್ಕುಗಳನ್ನು ನೀಡುತ್ತದೆ ಎಂದು ಭರವಸೆ ನೀಡಿದ್ದಾರೆ. ಆರ್‌ಎಲ್‌ಡಿ ಅಧ್ಯಕ್ಷ ಜಯಂತ್ ಚೌಧರಿ ಅವರು ಅಧಿಕಾರಕ್ಕೆ ಬಂದ ನಂತರ ತಾವು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ ರೈತರ ಸ್ಮಾರಕವನ್ನು ನಿರ್ಮಿಸುವುದಾಗಿ ಹೇಳಿದರು. ಬಿಜೆಪಿ ನಾಯಕರು ಸಮಾಜದಲ್ಲಿ ಒಡಕು ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ ಅಖಿಲೇಶ್, ಎಸ್‌ಪಿ ಮತ್ತು ಆರ್‌ಎಲ್‌ಡಿ ಕಾರ್ಯಕರ್ತರ ಸಹೋದರತ್ವವನ್ನು ಬಲಪಡಿಸುತ್ತೇವೆ ಎಂದು ತಿಳಿಸಿದರು.
ಬಿಜೆಪಿ ಆಡಳಿತದಲ್ಲಿ ಗೊಬ್ಬರ, ಔಷಧಿ, ಆಕ್ಸಿಜನ್ ಬೆಡ್ಗಾಗಿ ಜನರು ಸರತಿ ಸಾಲಿನಲ್ಲಿ ನಿಲ್ಲಬೇಕಿತ್ತು. ನೋಟು ರದ್ಧತಿ ಸಂದರ್ಭದಲ್ಲೂ ಜನ ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ ಈ ಬಾರಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ಜನ ಸರತಿ ಸಾಲಿನಲ್ಲಿ ನಿಲ್ಲುತ್ತಾರೆ. ಬಿಜೆಪಿಯ ದ್ವೇಷ ರಾಜಕಾರಣವನ್ನು ತಿರಸ್ಕರಿಸುತ್ತೇವೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಗುಡುಗಿದರು.